ಉಡುಪಿ: ಸಾಮಾಜಿಕ ಜಾಲತಾಣಗಳು ಸಮಾಜದ ಎಲ್ಲ ವರ್ಗಗಳ ಧ್ವನಿಯಾಗಬೇಕೇ ಹೊರತು, ಯಾವುದೇ ರಾಜಕೀಯ ಪಕ್ಷದ ಮುಖವಾಣಿಯಾಗಬಾರದು. ಆದರೆ ಮೆಟಾ ಸಂಸ್ಥೆ ಬಿಜೆಪಿ ಮತ್ತು ಆರ್ಎಸ್ಎಸ್ನ ಏಜೆಂಟ್ನಂತೆ ಕಾರ್ಯನಿರ್ವಹಿಸುತ್ತಿದೆ. ಮೆಟಾ ಸಂಸ್ಥೆ ಬಿಜೆಪಿ ಬೇಟಾ ಆಗಿ ಕೆಲಸ ಮಾಡುತ್ತಿರುವುದು ದುರದೃಷ್ಟಕರ. ಕಾಂಗ್ರೆಸ್ ವಿರುದ್ಧ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ಮೆಟಾ ಸಂಸ್ಥೆ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸುತ್ತಿದೆ ಎಂಬುದಾಗಿ ಆರೋಪಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡುವಾಗ ಮೈಕ್ ಬಂದ್ ಮಾಡಲಾಗಿತ್ತು. ಬಿಜೆಪಿಯ ವ್ಯವಸ್ಥಿತ ಸಂಚು ಇದೀಗ ಸಾಮಾಜಿಕ ಜಾಲತಾಣಗಳಿಗೂ ವಿಸ್ತರಿಸಿದೆ. ಕಾಂಗ್ರೆಸ್ ಧ್ವನಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ವಿರುದ್ಧ ಧ್ವನಿ ಎತ್ತುವವರ ಅಭಿಪ್ರಾಯಗಳಿಗೆ ಕಡಿವಾಣ ಹಾಕಲಾಗುತ್ತಿದೆ ಎಂದು ಆರೋಪಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮಾತನಾಡಿ, ಯುವ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಸುರೇಶ್ ಶೆಟ್ಟಿ ಬನ್ನಂಜೆ, ನವೀನ್ ಸಾಲಿಯಾನ್, ಡಾ. ಸುನೀತಾ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.