ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಉಡುಪಿ: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ಕಾಂಗ್ರೆಸ್ ನಾಯಕರ ಮೇಲಿನ ದೌರ್ಜನ್ಯವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಜನಸಾಮಾನ್ಯರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಎನ್ಎಸ್ಯುಐ ಜಿಲ್ಲಾ ಅಧ್ಯಕ್ಷ ಸೌರಭ್ ಬಲ್ಲಾಳ್ ಮಾತನಾಡಿ, ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಲುಕ್ ಅವರನ್ನು ಆಸ್ಪತ್ರೆಗೆ ಸೇರಿಸಿ ಬಲವಂತವಾಗಿ ಪ್ರತಿಭಟನೆ ಮೊಟಕುಗೊಳಿಸುವಂತೆ ಮಾಡಲಾಗಿದೆ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ, ಪ್ರಖ್ಯಾತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪ್ರತಿಭಟನೆಯ ವೇಳೆ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು. ರಸ್ತೆ ತಡೆ ನಡೆಸಲು ಯತ್ನಿಸಿದ ಕೆಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.