ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಬ್ಯಾನರ್ ಅನ್ನು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅನಾವರಣಗೊಳಿಸಿದರು. ಸಮ್ಮೇಳನ ಸಮಿತಿ ಅಧ್ಯಕ್ಷ ಡಾ.ವೆಂಕಟ್ರಮಣ ಹೊಳ್ಳ, ಡಾ.ವಾಮನ್ ರಾವ್ ಬೇಕಲ್, ಎ.ಆರ್.ಸುಬ್ಬಯ್ಯ ಕಟ್ಟೆ, ಸಾಹಿತಿ ಶ್ರೀಹರಿ ಭಟ್ ಪೆಲ್ತಾಜೆ ಇತರರು ಇದ್ದರು.  
ಉಡುಪಿ

ಕಾಸರಗೋಡಿನಲ್ಲಿ ಕನ್ನಡದ ಅಸ್ತಿತ್ವ ಉಳಿಸಿಕೊಳ್ಳುವ ಹೊಣೆ

ಕಾಸರಗೋಡು: ಕಾಸರಗೋಡು ಭೌಗೋಳಿಕವಾಗಿ ಕೇರಳದಲ್ಲಿದ್ದರೂ ನಮ್ಮ ಬದುಕು, ಸಂಸ್ಕೃತಿ ಮತ್ತು ಭಾಷೆಯಲ್ಲಿ ಕನ್ನಡದ ಅಸ್ತಿತ್ವ ಉಳಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ಕನ್ನಡದ ರಕ್ಷಣೆ ಹಾಗೂ ಬೆಳವಣಿಗೆಗಾಗಿ ಸಂಘ-ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಂದಕ್ಕೂ ಸರ್ಕಾರದ ನೆರವನ್ನೇ ಅವಲಂಬಿಸದೆ ಸ್ವಾವಲಂಬನೆಯ ಮನೋಭಾವ ಬೆಳೆಸಿಕೊಳ್ಳಬೇಕು. ಕನ್ನಡ ಭವನವು ನಿರಂತರವಾಗಿ ಕನ್ನಡಪರ ಕಾರ್ಯಕ್ರಮ ಆಯೋಜಿಸುವ ಮೂಲಕ ಗಡಿನಾಡಿನ ಕನ್ನಡಿಗರನ್ನು ಒಗ್ಗೂಡಿಸುತ್ತಿರುವುದು ಶ್ಲಾಘನೀಯ ಎಂದು ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.
ನಗರದ ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಸಂಯುಕ್ತಾಶ್ರಯದಲ್ಲಿ ಜು.26ರಂದು ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಪ್ರಚಾರದ ಬ್ಯಾನರ್ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು.
ಸಮ್ಮೇಳನ ಸಮಿತಿ ಅಧ್ಯಕ್ಷ ಡಾ.ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯ ಕಟ್ಟೆ, ಸಾಹಿತಿ ಶ್ರೀಹರಿ ಭಟ್ ಪೆಲ್ತಾಜೆ, ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾ ರಾಣಿ ದಂಪತಿ, ಅಶೋಕ್ ಚಂದ್ರಗಿ(ಬೆಳಗಾವಿ), ಬಲರಾಮ್ ಬೆಳಗಾವಿ, ಪತ್ರಕರ್ತ ಜಗನ್ನಾಥ್ ಶೆಟ್ಟಿ, ವಸಂತ್ ಕೆರೆಮನೆ, ಎಡನೀರು ಮಠದ ವ್ಯವಸ್ಥಾಪಕ ರಾಜೇಂದ್ರ ಕಲ್ಲೂರಾಯ ಉಪಸ್ಥಿತರಿದ್ದರು.