ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ಉಡುಪಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆಗಳು ಉಂಟಾಗುತ್ತವೆ. ಇವುಗಳನ್ನು ಆದ್ಯತೆಯ ಮೇಲೆ ಕೈಗೊಂಡು ಪೂರ್ಣಗೊಳಿಸಿ ಕುಡಿಯುವ ನೀರನ್ನು ಒದಗಿಸಬೇಕು ಎಂದು ವಿಧಾನ ಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ಟಿ. ರಘುಮೂರ್ತಿ ಸೂಚನೆ ನೀಡಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಮಗಾರಿಯ ವಿಳಂಬದಿಂದಾಗಿ ಯೋಜನಾ ವೆಚ್ಚವು ದಿನದಿಂದ ದಿನಕ್ಕೆ ಹೆಚ್ಚುತ್ತಿರುತ್ತದೆ. ದರ ಪರಿಷ್ಕರಣೆಯಲ್ಲಿ ಸಿಮೆಂಟ್ ಮತ್ತು ಕಬ್ಬಿಣದ ವಸ್ತುಗಳಿಗೆ ಮಾತ್ರ ಹೆಚ್ಚುವರಿ ಹಣ ನೀಡಲು ಸಾಧ್ಯ. ಕಾಮಗಾರಿಯ ವಿಳಂಬವಾದಾಗ ಹೆಚ್ಚುವರಿ ಅನುದಾನದ ಅವಶ್ಯಕತೆಯು ಉಂಟಾಗುತ್ತದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.
ಸಮಿತಿಯ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವ ಹಾಗೂ ಚರಂಡಿ ಕಾಮಗಾರಿ ಪೂರ್ಣಗೊಳಿಸಲು 5 ರಿಂದ 6 ವರ್ಷ ತೆಗೆದುಕೊಂಡರೆ ಜನರಿಗೆ ಸಮಸ್ಯೆಯಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಹೊಸದಾಗಿ 270 ಕಿ.ಮೀ. ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಈ ಹಿಂದೆ 2021ರಲ್ಲಿ 330 ಕೋಟಿ ರೂ. ಅಂದಾಜು ವೆಚ್ಚದ ಯೋಜನಾ ವರದಿಯನ್ನು ತಯಾರಿಸಿ, ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅಂದಾಜು ವೆಚ್ಚವು ಜಾಸ್ತಿಯಾಗಿದ್ದರಿಂದ ಅನುಮೋದನೆ ದೊರಕಿರುವುದಿಲ್ಲ. ಹೊಸದಾಗಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಮಿತಿಯ ಗಮನಕ್ಕೆ ತಂದರು.
ಸಭೆಯಲ್ಲಿ ಸಮಿತಿಯ ಸದಸ್ಯರಾದ ಜಿ.ಕೆ. ವೆಂಕಟಶಿವಾರೆಡ್ಡಿ, ಎಂ. ಕೃಷ್ಣಪ್ಪ, ಶಾಂತನಗೌಡ ಡಿ.ಜಿ, ಎಸ್. ಮುನಿರಾಜು, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.
"
ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಪ್ರತಿದಿನ 45 ಎಂ.ಎಲ್.ಡಿ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಪ್ರಸ್ತುತ ಬಜೆ ಹಾಗೂ ಹಾಲಾಡಿ ಕೆ.ಎನ್.ಎನ್.ಎಲ್ ನಾಲೆಯಿಂದ ತಾತ್ಕಾಲಿಕವಾಗಿ ನೀರು ನೀಡಲಾಗುತ್ತಿದೆ. ಭರತ್ಕಲ್ ಜಾಕ್ವೆಲ್ನಿಂದ ಹಾಲಾಡಿ ನೀರು ಶುದ್ಧೀಕರಣ ಘಟಕದವರೆಗೆ 3 ಕಿ.ಮೀ ಪೈಪ್ಲೈನ್ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧಿನ ಪ್ರಕ್ರಿಯೆ ಪೂರ್ಣಗೊಳಿಸಿ, ಕಾಮಗಾರಿಯನ್ನು ಶೀಘ್ರದಲ್ಲಿಯೇ ಮುಕ್ತಾಯಗೊಳಿಸಬೇಕು.
— ಟಿ. ರಘುಮೂರ್ತಿ,
ಅಧ್ಯಕ್ಷ , ವಿಧಾನ ಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ