ರೋಹಿತ್ ಹಾಗೂ ಸಂತ್ರಿ ಬಂಧಿತರು.
ಉಡುಪಿ: ನೌಕಾದಳಕ್ಕೆ ಸಂಬಂಧಪಟ್ಟ ಹಡಗುಗಳ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಆರೋಪದಲ್ಲಿ ಮಲ್ಪೆಯ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಸುಲ್ತಾನ್ಪುರ ಜಿಲ್ಲೆಯ ರೋಹಿತ್ (29) ಹಾಗೂ ಸಂತ್ರಿ(37) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಡಿ. 3ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ರೋಹಿತ್ ಎಂಬಾತ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ನಲ್ಲಿ ಗುತ್ತಿಗೆ ಆಧಾರದಲ್ಲಿ ಇನ್ಸುಲೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಶಿಪ್ಯಾರ್ಡ್ನಲ್ಲಿ ನಿರ್ಮಾಣವಾಗುತ್ತಿದ್ದ ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬ್ರಗಳ ಪಟ್ಟಿ ಸಹಿತ ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ವಿದೇಶಗಳಿಗೆ ರವಾನಿಸಿ ಅಕ್ರಮ ಲಾಭ ಪಡೆದಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ತಿಳಿಸಿದ್ದಾರೆ.
ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ಗೆ 6 ತಿಂಗಳ ಹಿಂದೆ ವರ್ಗಾವಣೆಗೊಂಡು ಬಂದಿದ್ದು, ನಂತರವೂ ಆತನು ಕೊಚ್ಚಿಯಲ್ಲಿರುವ ಸ್ನೇಹಿತ ಸಂತ್ರಿ ಮೂಲಕ ಮಾಹಿತಿ ಪಡೆದು, ಪುನ@ ವಾಟ್ಸಪ್ ಮೂಲಕ ಅನಧಿಕೃತ ವ್ಯಕ್ತಿಗೆ ಶೇರ್ ಮಾಡಿ, ಭಾರತದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಗೆ ಅಪಾಯವನ್ನುಂಟು ಮಾಡುವ ಮತ್ತು ಆಂತರಿಕ ಭಧ್ರತೆಗೆ ಧಕ್ಕೆ ತರುವ ಕೆಲಸ ಮಾಡಿರುವ ಬಗ್ಗೆ ಮಲ್ಪೆಯ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಸಿಇಒ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಪ್ರಕರಣವು ರಾಷ್ಟ್ರದ ಭದ್ರತೆ ದೃಷ್ಟಿಯಿಂದ ಅತ್ಯಂತ ಗಂಭೀರವಾಗಿದ್ದು, ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿದ್ದು, ಆರೋಪಿಗಳನ್ನು ಶನಿವಾರ ಕಸ್ಟಡಿಗೆ ಪಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.