ಕೆ.ಎಸ್.ಬಸವಂತಪ್ಪ ಮುಜರಾಯಿ, ಮೀನುಗಾರಿಕೆ ಸಚಿವ  
ಉಡುಪಿ

ಮೀನುಗಾರರ ಸಮಸ್ಯೆಗೆ ಪರಿಹಾರ ಶೀಘ್ರ

ಇಂದಿರಾ ಎನ್ ಕೆ
ಕುಂದಾಪುರ: ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಮೀನುಗಾರಿಕಾ ಬಂದರು ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು.
ಮರವಂತೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಂದಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ವೇಗ ನೀಡಿ ಪೂರ್ಣಗೊಳಿಸಲಾಗುವುದು. ಮರವಂತೆ ಹೊರಬಂದರು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದ್ದು, ಇಲ್ಲಿ ದೋಣಿಗಳಿಗೆ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.
ಇತ್ತೀಚೆಗೆ ನಡೆದ ದೋಣಿ ದುರಂತ ಕಾರಣಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಪರಿಹಾರ ಕಂಡುಕೊಳ್ಳಲಾಗುವುದು. ಸೀ ಆಂಬುಲೆನ್ಸ್ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು. ಬಂದರು ಹಾಗೂ ಅಳಿವೆಯಲ್ಲಿ ಹೂಳೆತ್ತುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿ ನಿರ್ಧರಿಸಲಾಗುವುದು.
ಮೀನುಗಾರಿಕೆ ನಡೆಸುವ ಸಂದರ್ಭ ಆಕಸ್ಮಿಕವಾಗಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಪರಿಹಾರ ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ 10 ಲಕ್ಷ ರೂ. ಪರಿಹಾರವನ್ನು ಶೀಘ್ರದಲ್ಲಿಯೇ ವಿತರಿಸಲು ಕ್ರಮಕೈಗೊಳ್ಳಲಾಗುವುದು. ನಾಡದೋಣಿ ಮೀನುಗಾರರಿಗೆ ವಿತರಿಸಲಾಗುತ್ತಿರುವ ಸೀಮೆಎಣ್ಣೆಗೆ ಪ್ರತಿ ಲೀಟರ್‌ಗೆ 35 ರೂ. ಸಬ್ಸಿಡಿಯನ್ನು ರಾಜ್ಯ ಸರ್ಕಾರ ನೀಡುತ್ತಿದ್ದು, ಮಾರುಕಟ್ಟೆಯಲ್ಲಿ ಸೀಮೆಎಣ್ಣೆ ದರ ಹೆಚ್ಚಳದಿಂದ ಮೀನುಗಾರರಿಗೆ ಹೊರೆಯಾಗುತ್ತಿರುವುದರಿಂದ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಸಬ್ಸಿಡಿ ಹೆಚ್ಚಳ ಮಾಡಲು ಮನವಿ ಮಾಡಿಕೊಳ್ಳಲಾಗುವುದು ಎಂದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಕಾಂಗ್ರೆಸ್ ಮುಖಂಡರಾದ ರಾಜು ಪೂಜಾರಿ, ಅರವಿಂದ ಪೂಜಾರಿ, ಪ್ರದೀಪ ಕುಮಾರ್ ಶೆಟ್ಟಿ ಗುಡಿಬೆಟ್ಟು, ವಿನಾಯಕ ಬಿಲ್ಲವ, ಕಾಂಗ್ರೆಸ್ ಮುಖಂಡರು, ಜಿಪಂ., ತಾಪಂ., ಗ್ರಾಪಂ. ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಕರಾವಳಿ ಭಾಗದ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಲು ಮತ್ತು ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ನೀಡಲು ಮುಖ್ಯಮಂತ್ರಿಗಳು ಆಸಕ್ತಿ ತೋರುತ್ತಿದ್ದಾರೆ. ಈ ದೃಷ್ಟಿಯಿಂದ ಮಂಗಳೂರಿನಲ್ಲಿ ಕ್ಯಾಬಿನೆಟ್ ಸಭೆ ಆಯೋಜಿಸಲಾಗಿದ್ದು, ಕರಾವಳಿ ಭಾಗದ ಅನೇಕ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದು, ಮುಖ್ಯಮಂತ್ರಿಗಳು ಈ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ಇದೆ.