ಉಡುಪಿ: ಉಡುಪಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಜವಾಬ್ದಾರಿಯನ್ನು ಎಂ/ಎಸ್ ಬ್ರಿಡ್ಜ್ ಆ್ಯಂಡ್ ರೂಫ್ ಕೋ. (ಇಂಡಿಯಾ) ಲಿಮಿಟೆಡ್ ಸಂಸ್ಥೆಗೆ ವಹಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಆಸ್ಪತ್ರೆ ನಿರ್ಮಾಣದ ಕಾಮಗಾರಿ ಆರಂಭವಾಗಲಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ವಿಚಾರವಾಗಿ ಕೇಂದ್ರ ಇಎಸ್ಐಸಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಮಹಾನಿರ್ದೇಶಕ ಅಶೋಕಕುಮಾರ ಸಿಂಗ್ ಅವರು ಸರ್ಕಾರದ ಪರವಾಗಿ ನನಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಸ್ತಾಪಿತ 100 ಹಾಸಿಗೆಯ ಇಎಸ್ಐ ಆಸ್ಪತ್ರೆ ನಿರ್ಮಾಣ ಹಂತದಲ್ಲಿದ್ದು, ಬ್ರಹ್ಮಾವರದಲ್ಲಿ ಕಾಯ್ದಿರಿಸಲಾದ ಸುಮಾರು 6 ಎಕರೆ ಪ್ರದೇಶದಲ್ಲಿ ಆವರಣ ಗೋಡೆ ರಚನೆ ಪ್ರಗತಿಯಲ್ಲಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿ ಆರಂಭಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.