ಮಲ್ಪೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಾ. ಪಿ.ವಿ. ಭಂಡಾರಿ ಉದ್ಘಾಟಿಸಿದರು. ಡಾ. ಅಶೋಕ್ ಕಾಮತ್, ಯಶ್ಪಾಲ್ ಸುವರ್ಣ, ಜಯ ಸಿ. ಕೋಟ್ಯಾನ್, ಗೋಪಾಲ್ ಸಿ. ಬಂಗೇರ, ಯೋಗೀಶ್ ಸಾಲ್ಯಾನ್, ಆನಂದ್ ಸುವರ್ಣ ಇತರರಿದ್ದರು.
* ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಅಭಿಪ್ರಾಯ
* ಮೀನು ಮಾರಾಟ ಫೆಡರೇಷನ್ನಿಂದ 1,455 ಮಕ್ಕಳಿಗೆ ಪುರಸ್ಕಾರ
ಉಡುಪಿ: ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಯಶಸ್ವಿಯಾಗಲು ಶೈಕ್ಷಣಿಕ ಸಾಧನೆಯೊಂದಿಗೆ ಸವಾಲುಗಳನ್ನು ಎದುರಿಸಲು ಧನಾತ್ಮಕ ಚಿಂತನೆ, ಮಾನಸಿಕ ಸ್ಥೈರ್ಯ ಹೆಚ್ಚಿಸಿಕೊಳ್ಳುವುದು ಅಗತ್ಯ. ಅದಕ್ಕೆ ಪೂರಕವಾಗಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮೀನು ಮಾರಾಟ ಫೆಡರೇಷನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಸುಮಾರು 1 ಕೋಟಿ ರೂ. ಮೊತ್ತದ ಪ್ರತಿಭಾ ಪುರಸ್ಕಾರ ವಿತರಿಸಿರುವುದು ಶಿಕ್ಷಣದ ಸಾಮಾಜಿಕ ಬದ್ಧತೆ ಮೆರೆದಂತಾಗಿದೆ ಎಂದು ಉಡುಪಿಯ ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಅಭಿಪ್ರಾಯಪಟ್ಟರು.
ಮಲ್ಪೆಯ ಏಳೂರು ಮೊಗವೀರ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ವತಿಯಿಂದ ಶನಿವಾರ (ಜ.31) ಆಯೋಜಿಸಿದ್ದ ಉಡುಪಿ ಜಿಲ್ಲೆಯ 1,455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಶಕ್ತಿಯಾಗಿ
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅಶೋಕ್ ಕಾಮತ್ ಮಾತನಾಡಿ, ಶಾಲಾ ದಿನಗಳಿಂದಲೇ ಮಕ್ಕಳು ಶಿಕ್ಷಣದೊಂದಿಗೆ ತಮ್ಮ ಅಭಿರುಚಿಯ ಚಟುವಟಿಕೆ, ಆಸಕ್ತಿಯ ವಿಷಯ ಮೈಗೂಡಿಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಮೂಲಕ ಸಮಾಜದ ಶಕ್ತಿಯಾಗಬೇಕು ಎಂದರು.
ಸಾಧಕರಿಗೆ ಸನ್ಮಾನ
2025ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ಮಲ್ಪೆ ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್ ಸುವರ್ಣ, ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾದ ರಾಷ್ಟ್ರೀಯ ಚೆಸ್ ಪಂದ್ಯಾಟದಲ್ಲಿ ಕಂಚಿನ ಪದಕ ಗಳಿಸಿದ ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಸ್ಕೂಲ್ನ 8ನೇ ತರಗತಿ ವಿದ್ಯಾರ್ಥಿನಿ, ಕ್ರೀಡಾ ಸಾಧಕಿ ರಿಮಾ ರಾವ್ ಯು.ಬಿ. ಅವರನ್ನು ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ನಗರಸಭಾ ಮಾಜಿ ಸದಸ್ಯ ಯೋಗೀಶ್ ಸಾಲ್ಯಾನ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಸ್ಥೆಯ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಮತ್ಸ್ಯೋದ್ಯಮಿ ಆನಂದ್ ಪಿ. ಸುವರ್ಣ, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ರತ್ನಾಕರ ಸಾಲ್ಯಾನ್, ಆಳ ಸಮುದ್ರ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸುಭಾಷ್ ಮೆಂಡನ್, ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಕೋಟ ಪರ್ಸೀನ್ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಜೇಂದ್ರ ಸುವರ್ಣ, ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷೆ ಗೀತಾ ಕರ್ಕೇರ, ನಗರಸಭಾ ಮಾಜಿ ಸದಸ್ಯರಾದ ಸುಂದರ ಕಲ್ಮಾಡಿ, ಎಡ್ಲಿನ್ ಕರ್ಕಡ, ಫೆಡರೇಷನ್ನ ಉಪಾಧ್ಯಕ್ಷ ದೇವಪ್ಪ ಕಾಂಚನ್, ವ್ಯವಸ್ಥಾಪಕ ನಿರ್ದೇಶಕಿ ದರ್ಶನಾ ಟಿ.ಕೆ., ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು. ವಿಜೇತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.