ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ್ ಉದ್ಘಾಟಿಸಿದರು.
ಉಡುಪಿ: ಮಕ್ಕಳ ಜೀವನವನ್ನು ರೂಪಿಸುವ ಜವಾಬ್ದಾರಿ ಪೋಷಕರದ್ದಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ನಿರ್ವಹಿಸದೇ ಇದ್ದಲ್ಲಿ ಬಾಲಕಾರ್ಮಿಕರ ಸಂಖ್ಯೆ ಹೆಚ್ಚುತ್ತದೆ. ಬಾಲಕಾರ್ಮಿಕ ಪದ್ಧತಿಯನ್ನು ತಳ ಮಟ್ಟದಲ್ಲಿ ನಿಮೂರ್ಲನೆ ಮಾಡಿ ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ್ ಹೇಳಿದರು.
ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿಯು ಸಮಾಜದ ಅನಿಷ್ಠ ಪದ್ಧತಿಗಳಲ್ಲಿ ಒಂದಾಗಿದ್ದು, ಇದರಿಂದ ಮಕ್ಕಳ ಬಾಲ್ಯಾವಸ್ಥೆಯ ಸವಿಯನ್ನು ಮೊಟಕುಗೊಳಿಸಿ, ಶಿಕ್ಷಣ ವಂಚಿತರನ್ನಾಗಿ ಮಾಡುತ್ತದೆ. ಮಕ್ಕಳು ತಮ್ಮ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಅನೇಕ ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದ್ದು, ಮಕ್ಕಳು ಇದರಿಂದ ವಂಚಿತರಾಗಬಾರದು. ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ ಅವರ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಸಮಾಜ ನೆರವಾಗಬೇಕಿದೆ ಎಂದರು.
ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಬಂದ ಹಣದಿಂದ ತಂಬಾಕು, ಧೂಮಪಾನ ಸೇರಿದಂತೆ ಮಾದಕ ವ್ಯಸನಕ್ಕೆ ತುತ್ತಾಗಿ, ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ಬಡತನ ಇದ್ದರೂ ಪೋಷಕರು ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.
ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, 14 ವರ್ಷದೊಳಗಿನ ಯಾವುದೇ ಮಗು ಹೋಟೆಲ್, ಕಾರ್ಖಾನೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ದುಡಿಯುತ್ತಿರುವುದು ಕಂಡುಬಂದಲ್ಲಿ ಅವರ ಮನವೊಲಿಸಿ, ಶಿಕ್ಷಣ ಪಡೆಯುವಂತೆ ಮಾಡಬೇಕು. ದೇಶದಲ್ಲಿ ಯುವಜನತೆಯ ಸಂಖ್ಯೆ ಹೆಚ್ಚಿದ್ದು, ಯುವಸಂಪತ್ತಿನಿಂದ ದೇಶದ ಅಭಿವೃದ್ಧಿ ಸಾಧ್ಯವಿದೆ. ಈ ನಿಟ್ಟಿನಲ್ಲಿ ಯುವ ಸಂಪನ್ಮೂಲವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಭೋಧಿಸಿ ಮಾತನಾಡಿದರು. ಚೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ಡಾ. ವಿಜೇಂದ್ರ ಮಾತನಾಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತ ಮತ್ತಿತರರು ಉಪಸ್ಥಿತರಿದ್ದರು. ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕ ನವೀನ್ ಕುಮಾರ್ ಸಿ.ಎಚ್. ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ಕುಂದಾಪುರ ವೃತ್ತ ಕಾರ್ಮಿಕ ನಿರೀಕ್ಷಕ ವಿಜೇಂದ್ರ ಕೆ. ವಂದಿಸಿದರು.