ಜಿಲ್ಲೆ

ಅಭಿವೃದ್ಧಿ ಕುಂಠಿತ, ಸೌಲಭ್ಯ ವಂಚನೆ: ಅಬ್ಬೇನಹಳ್ಳಿ, ತಿಮ್ಮಪ್ಪಯ್ಯನಹಳ್ಳಿ ಗ್ರಾ.ಪಂ.ನಲ್ಲಿ ಭ್ರಷ್ಟಾಚಾರ ವಿರುದ್ಧ ಆಕ್ರೋಶ

ಹರ್ಷ ನ.ಪುರೋಹಿತ
ಚಳ್ಳಕೆರೆ: ತಾಲೂಕಿನ ನಾಯಕನಹಟ್ಟಿ ಹೋಬಳಿಯ ಅಬ್ಬೇನಹಳ್ಳಿ ಮತ್ತು ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು ಸುಮಾರು ₹70 ಲಕ್ಷ ಅನುದಾನ ದುರುಪಯೋಗವಾಗಿರುವ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸೋಮವಾರ ತಾಲೂಕು ಪಂಚಾಯಿತಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ ತಾಪಂ ಇಒ ಎಚ್. ಶಶಿಧರ ಅವರಿಗೆ ಮನವಿ ಸಲ್ಲಿಸಲಾಯಿತು.

ಅನುದಾನ ದುರುಪಯೋಗ ಆರೋಪ

ಎರಡೂ ಗ್ರಾಮ ಪಂಚಾಯಿತಿಗಳಲ್ಲಿ ನಕಲಿ ಬಿಲ್‌ಗಳನ್ನು ಬಳಸಿ 15ನೇ ಹಣಕಾಸು ಯೋಜನೆಯ ಅನುದಾನವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಅವ್ಯವಹಾರದ ಕುರಿತು ಕೆಲ ದಾಖಲೆಗಳ ಸಹಿತ ಈಗಾಗಲೇ ಮನವಿ ಸಲ್ಲಿಸಿದ್ದರೂ, ಇದುವರೆಗೂ ಯಾವುದೇ ತನಿಖೆ ಕಾರ್ಯ ನಡೆದಿಲ್ಲ ಎಂದು ರೈತ ಸಂಘದ ಪದಾಧಿಕಾರಿಗಳು ದೂರಿದರು.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪಂಚಾಯಿತಿ ಹಂತದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದ್ದು, ಗ್ರಾಮಗಳು ಅಭಿವೃದ್ಧಿ ಕಾಣುತ್ತಿಲ್ಲ. ಅರ್ಹ ಫಲಾನುಭವಿಗಳಿಗೆ ನ್ಯಾಯಬದ್ಧವಾಗಿ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಬೀದಿ ದೀಪಗಳ ನಿರ್ವಹಣೆಯೂ ಸರಿಯಾಗಿ ಆಗುತ್ತಿಲ್ಲ.

ಅಲ್ಲದೆ, ಅಧಿಕಾರಿಗಳಿಗೆ ದೂರು ನೀಡಿದವರ ಮೇಲೆ ಹಲ್ಲೆ ನಡೆಸಲು ಕುಮ್ಮಕ್ಕು ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಕಾನೂನು ಕ್ರಮಕ್ಕೆ ಒತ್ತಾಯ

ಹಣಕಾಸಿನ ಅವ್ಯವಹಾರದ ಬಗ್ಗೆ ತಕ್ಷಣ ತನಿಖೆ ನಡೆಸಲು ಸಮಿತಿ ರಚನೆ ಮಾಡಬೇಕು. ಅವ್ಯವಹಾರದಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಮನವಿ ಮೂಲಕ ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಗ್ರಾ.ಪಂ. ಸದಸ್ಯ ಹಿರೇಹಳ್ಳಿ ರಾಜಣ್ಣ, ವಕೀಲ ಆರ್. ರುದ್ರಮುನಿ, ರವಿಕುಮಾರ್, ರಾಮಾಂಜಿನಪ್ಪ, ರಾಜಣ್ಣ, ಪ್ರಶಾಂತ್‌ರೆಡ್ಡಿ ಮತ್ತಿತರರು ಭಾಗವಹಿಸಿದ್ದರು.