ಮಂಡ್ಯ: ಸರ್ಕಾರಿ ಶಾಲೆಯ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಅತಿಥಿ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.
ತಾಲೂಕಿನ ಬಿ.ಗೌಡಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎನ್.ಚಲುವರಾಯಸ್ವಾಮಿ ಹಿತೈಷಿಗಳ ಬಳಗದಿಂದ ಆಯೋಜಿಸಿದ್ದ ಸಮವಸ್ತ್ರ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಮಾತ್ರವಲ್ಲದೆ ಅಗತ್ಯಕ್ಕೆ ತಕ್ಕಂತೆ ಅನುದಾನ ಒದಗಿಸಲಿದೆ. ಅಂತೆಯೇ ರಾಜ್ಯದಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಗೊಳಿಸಿ ಯಾವುದೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು. ಶಿಥಿಲಗೊಂಡಿರುವ ಶಾಲೆಯ ಎರಡು ಕೊಠಡಿಗಳನ್ನು ಸಂಪೂರ್ಣ ತೆರವುಗೊಳಿಸಿ ನೂತನ ಕೊಠಡಿ ನಿರ್ಮಿಸಿ ಕೊಡುವಂತೆ ಶಾಲೆಯ ಮುಖ್ಯಶಿಕ್ಷಕರು ಸಲ್ಲಿಸಿದ ಮನವಿಗೆ ಶಾಸಕರು ಸಮ್ಮತಿ ಸೂಚಿಸಿದರು.
ಕರುನಾಡ ಸೇವಕರು ಸಂಘಟನೆಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಬಲವರ್ಧನೆಗೊಳಿಸಲು ರಾಜ್ಯ ಸರ್ಕಾರ ಅಗತ್ಯ ಕಾರ್ಯಕ್ರಮ ರೂಪಿಸಬೇಕು. ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುತ್ತಿವೆ. ಅಗತ್ಯ ಶಿಕ್ಷಕರ ಹಾಗೂ ಮೂಲ ಸೌಕರ್ಯದ ಕೊರತೆಯಿಂದ ಸರ್ಕಾರಿ ಕನ್ನಡ ಶಾಲೆಗಳು ಅಸ್ತಿತ್ವದ ಭೀತಿ ಎದುರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ಬಳಗದ ಅಧ್ಯಕ್ಷ ನವೀನ್‌ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಸತೀಶ್, ಎಸ್‌ಡಿಎಂಸಿ ಅಧ್ಯಕ್ಷ ಪ್ರಶಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು, ಮುಖ್ಯಶಿಕ್ಷಕ ಲಿಂಗರಾಜು, ಮುಖಂಡ ಜಯರಾಂ ಇತರರಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಅತಿ ಹೆಚ್ಚು ಅಂಕ ಪಡೆದಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.