ಮಂಡ್ಯ: ಕೆಆರ್‌ಎಸ್ ಜಲಾಶಯದ ಸುರಕ್ಷತೆ ಹಿನ್ನೆಲೆಯಲ್ಲಿ ಟ್ರಯಲ್ ಬ್ಲಾಸ್ಟ್ ಸ್ಥಗಿತಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ನಡೆದ ಪ್ರತಿಭಟನಾ ಸ್ಥಳಗಳಿಗೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನವಿ ಸ್ವೀಕರಿಸಿದರು.
ಟ್ರಯಲ್ ಬ್ಲಾಸ್ಟ್ ನಡಸಿದರೆ ಜಲಾಶಯಕ್ಕೆ ಅಪಾಯವಿದೆ ಎಂಬ ಆತಂಕ ಎಲ್ಲರಲ್ಲೂ ಇದೆ. ಆದ್ದರಿಂದ ಬ್ಲಾಸ್ಟ್ ಸ್ಥಗಿತಗೊಳಿಸಲು ಅಧಿಕಾರಿಗಳ ಜತೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು. ಕೃಷ್ಣರಾಜಸಾಗರ ಜನರ ಬದುಕಿನ ಪ್ರಶ್ನೆಯಾಗಿದೆ. ಈ ಭಾಗದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಜಲಾಶಯಕ್ಕೆ ಅಪಾಯ ಎದುರಾಗಲಿದೆ ಎಂದು ಮೂರು ನಾಲ್ಕು ವರ್ಷದಿಂದ ಆತಂಕ ವ್ಯಕ್ತವಾಗುತ್ತಲೇ ಇದೆ. ಇದೀಗ ಟ್ರಯಲ್ ಬ್ಲಾಸ್ಟ್ ಮುಂದಾಗಿರುವ ಬಗ್ಗೆ ನ್ಯಾಯಾಲಯದ ಆದೇಶ ಇದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದಾಗ್ಯೂ ಅಧಿಕಾರಿಗಳ ಜತೆ ಚರ್ಚೆ ಮಾಡಲಾಗುವುದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಟ್ರಯಲ್ ಬ್ಲಾಸ್ಟ್ ಮಾಡಬಾರದು ಎಂಬ ನಿಮ್ಮ ಬೇಡಿಕೆಗೆ ನನ್ನ ಸಹಮತವಾಗಿದೆ. ಮಾತ್ರವಲ್ಲದೆ ನಿಮ್ಮ ಹೋರಾಟದ ಜತೆ ಇರುತ್ತೇನೆ ಎಂದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಇತರರಿದ್ದರು.