ಮಂಡ್ಯ: ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಮೇ 26ರಿಂದ 29ರವರೆಗೆ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದ್ದಾರೆ. 26 ರಂದು ಸಂಜೆ 6.30ಕ್ಕೆ ಜಿಲ್ಲೆಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. 27ರಂದು ಬೆಳಗ್ಗೆ 6.30ರಿಂದ ಮಧ್ಯಾಹ್ನ 2.30ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. 28ರಂದು ಬೆಳಗ್ಗೆ 6.30ಕ್ಕೆ ವಿವಿಧ ಸ್ಥಳದಲ್ಲಿ ಪರಿಶೀಲನೆ ನಡೆಸಲಿದ್ದಾರೆ. 10ಗಂಟೆಯಿಂದ ಸಂಜೆ 5 ವರೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರ ದೂರು ಮತ್ತು ಅಹವಾಲು ಸ್ವೀಕರಿಸಲಿದ್ದಾರೆ. ಸಂಜೆ 5 ರಿಂದ 6.30 ರವರೆಗೆ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ, ಆರ್‌ಡಿಪಿಆರ್ ಇಲಾಖೆ, ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಇತರ ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿರುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
29ರಂದು ಬೆಳಗ್ಗೆ 6.30ಕ್ಕೆ ವಿವಿಧ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. 9.45ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಜಿಲ್ಲೆಯ ನ್ಯಾಯಾಂಗ ಇಲಾಖೆ ಅಧಿಕಾರಿಗಳು, ವಕೀಲರು ಮತ್ತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 11ಗಂಟೆಯಿಂದ ಸಂಜೆ 6ರವರೆಗೆ ಜಿಲ್ಲೆಗೆ ಸಂಬಂಧಿಸಿದ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿಯನ್ನು ದೂರುದಾರರ ಮತ್ತು ಪ್ರತಿವಾದಿಗಳ ಸಮ್ಮುಖದಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಸಲಾಗುವುದು. ರಾತ್ರಿ 9 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.