ರಾಯಚೂರು ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಒತ್ತಾಯಿಸಿ ನಗರದ ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಮುಂದೆ ಸೋಮವಾರ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ ಎಂದು ದೂರಿದರು.
ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆ ಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕ ವಾದ ಸ್ಪಷ್ಟ ನಿಲುವು ತಾಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹಯ್ಯಳಪ್ಪ, ಕಾರ್ಯದರ್ಶಿ ಬಸವರಾಜ, ವೀರೇಶ, ನಂದ ಗೋಪಾಲ, ಶಿವ ಕುಮಾರ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.