ಬಿಜೆಪಿ ಕಾರ್ಯಕರ್ತರು ಕಾರವಾರದಲ್ಲಿ ಪ್ರತಿಭಟನೆ ನಡೆಸಿದರು 
ಉತ್ತರ ಕನ್ನಡ

ಬಿಡಿಗಾಸು ಬೆಳೆಹಾನಿ ಪರಿಹಾರ ಬಿಜೆಪಿ ಪ್ರತಿಭಟನೆ

ಸುಭಾಸ ಹೆಗಡೆ ಧೂಪದಹೊಂಡ
ಕಾರವಾರ: ಬೆಳೆ ಹಾನಿ ಪರಿಹಾರ ವಿತರಣೆ ಮಾಡದೇ‌ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರ ಮೂಲಕ ರಾಜ್ಯಪಾಲರಿಗೆ ಬರೆದ ಮನವಿ ಸಲ್ಲಿಸಲಾಯಿತು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮಾತನಾಡಿ, ರೈತರು ನಮ್ಮ ಅನ್ನದಾತರು. ವರ್ಷವಿಡೀ ಬೆಳೆದ ಬೆಳೆ ಅತಿವೃಷ್ಟಿಯಿಂದ ನಾಶವಾಗಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖರು ರೈತರ ಸಂಕಷ್ಟಕ್ಕೆ ಸ್ಪಂದನೆ ನೀಡುವ ಬದಲು ಖುರ್ಚಿ ಕಚ್ಚಾಟದಲ್ಲಿ ತೊಡಗಿದ್ದಾರೆ.
ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಅನುದಾನವನ್ನು ತಮ್ಮದು ಎಂದು ಹೇಳಿಕೊಂಡು ತಿರುಗುತ್ತಿದ್ದರೆ. ರಸ್ತೆ ಮುಚ್ಚುವ ಯೋಗ್ಯತೆ ಸರ್ಕಾರಕ್ಕಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಮಾತನಾಡಿ, ಅಡಕೆ ಬೆಳೆ ಕೊಳೆ ರೋಗದಿಂದ ಹಾಳಾಗಿದೆ. ಮಳೆಯಿಂದ ಭತ್ತದ ಬೆಳೆ ಹಾಳಾಗಿದೆ. ಪರಿಹಾರ ಬಂದಿಲ್ಲ. ಬಿಜೆಪಿ ಸರ್ಕಾರ ನೀಡಿದ ಪರಿಹಾರಕ್ಕೂ ಈಗಿನ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಪರಿಹಾರಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದರು.
ರಾಜ್ಯದಲ್ಲಿ 10,748 ಕೋಟಿ ರೂ. ಮೊತ್ತದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ, ರಾಜ್ಯ ಸರ್ಕಾರ 2251.63 ಕೋಟಿ ರೂ. ಮಾತ್ರ ಪರಿಹಾರ ನೀಡಲಾಗಿದೆ ಎಂದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ್, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ ಗುನಗಿ ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು.