ಹಣಕಾಸು ಸಾಕ್ಷರತಾ ಸಪ್ತಾಹದ ಭಿತ್ತಿ ಪತ್ರಗಳನ್ನು ಜಿಪಂ ಸಿಇಒ ಬಿಡುಗಡೆ ಮಾಡಿದರು.
ಕಾರವಾರ: ಸುರಕ್ಷಿತವಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ನಡೆಸುವ ಬಗ್ಗೆ ಮತ್ತು ಹಣಕಾಸು ಸಾಕ್ಷರತೆ ಹಾಗೂ ಕೆವೈಸಿ ಕುರಿತು ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಜಿಪಂ ಸಿಇಒ ಡಾ.ದಿಲೀಶ್ ಶಶಿ ಸೂಚಿಸಿದರು.
ಫೆಬ್ರವರಿ 9 ರಿಂದ 13 ರ ವರೆಗೆ ನಡೆಯುವ ಹಣಕಾಸು ಸಾಕ್ಷರತಾ ಸಪ್ತಾಹದ ಸಂಬಂಧ ಭಿತ್ತಿಪತ್ರವನ್ನು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಸಾರ್ವಜನಿಕರು ಬ್ಯಾಂಕಿಂಗ್ ವಂಚನೆಗಳ ಕುರಿತು ಜಾಗೃತರಾಗಿ, ಸುರಕ್ಷಿತವಾಗಿ ಹಣಕಾಸು ವ್ಯವಹಾರಗಳನ್ನು ನಡೆಸುವ ಕುರಿತಂತೆ ಎಲ್ಲಾ ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಅರಿವು ಮೂಡಿಸಬೇಕು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಆನ್‌ಲೈನ್ ವಂಚನೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.
ಎಲ್ಲಾ ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಅಟಲ್ ಪಿಂಚಣಿ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ, ಕೃಷಿ ಇಲಾಖೆಯ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಗಳನ್ನು ಆರಂಭಿಸಲು ಸಾಲ ನೀಡಲು ವಿಳಂಬವಾಗದಂತೆ ಶೀಘ್ರದಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಿ ಎಂದರು.
ಜಿಪಂ ಮುಖ್ಯ ಲೆಕ್ಕಾಧಿಕಾರಿ ಆನಂದ್ ಸಾ ಹಬೀಬ್, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ನಾಗರಾಜ ನಾಯಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ ಗಾಂವಕರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ ಗೌಳಿ ಇದ್ದರು.
ಮೃತರ ಮಾಹಿತಿ ನೀಡಿ
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಮೃತರಾದ ನಂತರವೂ ಅವರ ಖಾತೆಗಳಿಗೆ ಹಣೆ ಜಮಾ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳ ವಿವರಗಳನ್ನು ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಸಲ್ಲಿಸಿ ಎಂದು ಸೂಚನೆ ನೀಡಿದರು.