ಸಿದ್ದಾಪುರ ನೆಹರು ಮೈದಾನದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭೂಮಿಪೂಜೆ ನೆರವೇರಿಸಿದರು. ಶಾಸಕ ಭೀಮಣ್ಣ ನಾಯ್ಕ, ಸತೀಶ ನಾಯ್ಕ, ಕೆ.ಜಿ. ನಾಗರಾಜ, ಎಂ.ಆರ್. ಕುಲಕರ್ಣಿ ಇತರರಿದ್ದರು.
ಸಿದ್ದಾಪುರ: ಶಾಶ್ವತ ಕುಡಿಯುವ ನೀರು ಯೋಜನೆಯನ್ನು ಪಟ್ಟಣಕ್ಕೆ ಒದಗಿಸಬೇಕು ಎಂದು ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅವರ ಕನಸು ನನಸಾಗಿದೆ. ಈ ಕಾಮಗಾರಿ ಎರಡು ವರ್ಷದಲ್ಲಿ ಮುಕ್ತಾಯ ಮಾಡಬೇಕೆಂದಿದ್ದರೂ, 1.5 ವರ್ಷದಲ್ಲಿ ಪೂರ್ಣಗೊಳಿಸುವಂತೆ ಈಗಾಗಲೇ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಪಟ್ಟಣದ ನೆಹರು ಮೈದಾನದಲ್ಲಿ ಸೋಮವಾರ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರವಾರ, ಪಪಂ ಸಿದ್ದಾಪುರ ಸಹಯೋಗದಲ್ಲಿ ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಪಟ್ಟಣಕ್ಕೆ ಶರಾವತಿ ನದಿಮೂಲದಿಂದ 2ನೇ ಹಂತದ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ಜನತೆಗೆ ಮಾತು ಕೊಟ್ಟಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ 550 ಕೋಟಿ ರೂ. ನೀಡಿದೆ. ಎಲ್ಲ ಇಲಾಖೆಯವರೊಂದಿಗೆ ಚರ್ಚಿಸಿ ಯಾವ ಅಭಿವೃದ್ಧಿ ಕಾಮಗಾರಿ ಮಾಡಬೇಕು ಎನ್ನುವುದನ್ನು ಚರ್ಚಿಸಿ ಕಾರ್ಯರೂಪಕ್ಕೆ ತರುತ್ತೇವೆ. ಅಧಿಕಾರದಲ್ಲಿ ಇದ್ದಾಗ ಏನೂ ಅಭಿವೃದ್ಧಿ ಮಾಡದೇ ಈಗ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಆಗುತ್ತಿಲ್ಲ ಎಂದು ಹೇಳುವವರಿದ್ದಾರೆ ಎಂದರು.
ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಿದ್ದಾಪುರ ಪಟ್ಟಣಕ್ಕೆ ಕುಡಿಯುವ ನೀರಿಗಾಗಿ ಅಂದಾಜು 69.05 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ. 2.5 ವರ್ಷದಲ್ಲಿ ತಾಲೂಕಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 245 ಕೋಟಿ 65 ಲಕ್ಷ ರೂ. ಅನುದಾನ ನೀಡಲಾಗಿದೆ. ಕೇವಲ ಭೂಮಿ ಪೂಜೆ ಮಾಡುತ್ತಿದ್ದೇವೆ ಎನ್ನುವ ಆರೋಪ ಬೇಡ. ಅಭಿವೃದ್ಧಿ ಆಗುತ್ತಿರುವುದನ್ನು ನೋಡಬೇಕು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸತೀಶ ನಾಯ್ಕ, ತಾಲೂಕು ಅಧ್ಯಕ್ಷ ಕೆ.ಜಿ. ನಾಗರಾಜ, ಪಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ತಹಸೀಲ್ದಾರ್ ಎಂ.ಆರ್. ಕುಲಕರ್ಣಿ, ಪಪಂ ಮುಖ್ಯಾಧಿಕಾರಿ ಎಂ.ಡಿ. ಯಾಕೂಬ್ ಶೇಖ್, ತಾಪಂ ಇಒ ದೇವರಾಜ ಹಿತ್ತಲಕೊಪ್ಪ ಇತರರಿದ್ದರು. ಶಿವರಾಮ ನಾಯ್ಕ, ಗುರುರಾಜ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.