ಕಾರವಾರ: ಜಿಲ್ಲೆಯಲ್ಲಿ ಮಹಿಳೆಯರು ಕರ್ತವ್ಯ ನಿರ್ವಹಿಸುವ ಎಲ್ಲ ಸ್ಥಳಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ರಚಿಸಲು ಕ್ರಮ ವಹಿಸದ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅಸಮಾಧಾನ ವ್ಯಕ್ತಪಡಿಸಿದರು.
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ 2013 (ಪೊಶೊ) ರ ಕುರಿತು ಆಂತರಿತ ಸಮಿತಿಗಳ ಅಧ್ಯಕ್ಷರು, ಸದಸ್ಯರು ಮತ್ತು ನೋಡಲ್ ಅಧಿಕಾರಿಗಳಿಗಾಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಾಗೃತಿ ಕಾರ್ಯಾಗಾರ ಹಾಗೂ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ದೂರು ಸಮಿತಿಗೆ ಪ್ರತ್ಯೇಕ ಕೊಠಡಿಯೊಂದನ್ನು ತಕ್ಷಣ ನೀಡುವಂತೆ ಆದೇಶಿಸಿದರು.
ಮಹಿಳೆಯರು ಎಲ್ಲಾ ಸ್ಥಳಗಳಲ್ಲಿಯೂ ಸುರಕ್ಷಿತವಾಗಿರಬೇಕು ಎನ್ನುವ ಉದ್ದೇಶದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನು 13 ವರ್ಷಗಳ ಹಿಂದೆಯೇ ಜಾರಿಗೆ ತರಲಾಗಿದೆ. ಅದರ ಬಗ್ಗೆ ಯಾವುದೇ ಅಧಿಕಾರಿಗೂ ಸಮರ್ಪಕ ಮಾಹಿತಿಯೇ ಇಲ್ಲದಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದರು. ಮಹಿಳೆಯರು ಕೆಲಸ ನಿರ್ವಹಿಸುವ ಸರ್ಕಾರಿ ಕಚೇರಿಗಳು ಮಾತ್ರವಲ್ಲದೇ ಖಾಸಗಿ ಸಂಸ್ಥೆಗಳಲ್ಲೂ ಈ ಸಮಿತಿಗಳು ರಚನೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಪಂ ಸಿಇಒ ಡಾ.ದಿಲೀಷ್ ಶಶಿ, ಎಸ್ಪಿ ದೀಪನ್ ಎಂ.ಎನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ, ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಸಂಪನ್ಮೂಲ ವ್ಯಕ್ತಿ ಚಂದ್ರಿಕಾ ಇದ್ದರು.
ಕಾಲೇಜ್ಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಬಿಡಿ ಎಂದು ಜಿಲ್ಲೆಯ ವಿದ್ಯಾರ್ಥಿನಿಯರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರಿಗೆ ಮನವಿ ಮಾಡಿದರು.
ನಗರದ ಕ್ರಿಮ್ಸ್ನಲ್ಲಿ ಆಯೋಗದ ಅಧ್ಯಕ್ಷರು ಜಿಲ್ಲೆಯ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿನಿಯರ ಜೊತೆ ಸೋಮವಾರ ಸಂವಾದ ನಡೆಸಿದರು. ಆಗ ಬಹುತೇಕ ವಿದ್ಯಾರ್ಥಿನಿಯರ ಸಮಸ್ಯೆ ಒಂದೇ ಆಗಿತ್ತು. ಕಾಲೇಜ್ಗೆ ಬರಲು ಮತ್ತು ಇಲ್ಲಿಂದ ಮನೆಗೆ ತೆರಳಲು ಸೂಕ್ತ ಬಸ್ ವ್ಯವಸ್ಥೆ ಇಲ್ಲ. ಇದ್ದರೂ ಜನಜಂಗುಳಿಯಿಂದ ತುಂಬಿರುತ್ತದೆ ಎಂಬುದಾಗಿತ್ತು. ಆ ಬಗ್ಗೆ ಪ್ರತಿಕ್ರಿಯಿಸಿದ ಅಧ್ಯಕ್ಷರು ಎನ್ಡಬ್ಲುಕೆಆರ್ಟಿಸಿ ಅಧಿಕಾರಿಗಳಿಗೆ ಪತ್ರ ಬರೆದು ಕ್ರಮ ವಹಿಸುವ ಭರವಸೆ ನೀಡಿದರು.
ಕ್ರಿಮ್ಸ್ ಡೀನ್ ಡಾ.ಪೂರ್ಣಿಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ, ಡಿಎಚ್ಒ ಡಾ.ಸಂಜಯ ದೊಡ್ಡಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ, ಕಾರವಾರ ಡಿಡಿಪಿಐ ಶುಭಾ ನಾಯಕ, ಶಿರಸಿ ಡಿಡಿಪಿಐ ಲೀನಾ ನಾಯ್ಕ, ತಹಸೀಲ್ದಾರ್ ನಿಶ್ಚಲ್ ನರೋನ್ಹ, ಆಹಾರ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ರೇವಣಕರ್ ಇದ್ದರು.
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಬಾಡದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್, ಹಬ್ಬುವಾಡ ಕ್ರೀಡಾ ಹಾಸ್ಟೆಲ್, ಕಾರವಾರ ಮೀನು ಮಾರುಕಟ್ಟೆ, ಮಹಿಳಾ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮಹಿಳಾ ಪೊಲೀಸ್ ಠಾಣೆಯಲ್ಲಿ ಡೈರಿ ಪರಿಶೀಲಿಸಿದ ಅವರು ದೂರುದಾರಳಿಗೆ ಕರೆ ಮಾಡಿ, ಠಾಣೆಯಲ್ಲಿನ ಸ್ಪಂದನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.