ಮಡಿಕೇರಿ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೬ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವು ಇದೇ ಅ.೨೧ ರಿಂದ ನ.೨೦ ರವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಲಿಂಗರಾಜು ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ನಿಯಂತ್ರಣದ ೬ನೇ ಸುತ್ತಿನ ಲಸಿಕಾ ಅಭಿಯಾನ ನಡೆಯಲಿದೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೬ನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದನ ಮತ್ತು ಎಮ್ಮೆಗೆ ಕಾಲುಬಾಯಿ ರೋಗ ಕಾಣಿಸಿಕೊಳ್ಳಲಿದೆ. ಆದ್ದರಿಂದ ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ಲಿಂಗರಾಜ ದೊಡ್ಡಮನಿ ಕೋರಿದರು.
ಕಾಲುಬಾಯಿ ರೋಗ ನಿಯಂತ್ರಿಸಲು ಜಾನುವಾರುಗಳಿಗೆ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ. ಈ ರೋಗದ ವಿರುದ್ಧ ಪ್ರತೀ ೬ ತಿಂಗಳಿಗೊಮ್ಮೆ ಜಾನುವಾರುಗಳಿಗೆ ಲಸಿಕೆ ಕೊಡಿಸಿ ರೋಗ ಬರದಂತೆ ತಡೆಯಬೇಕಿದೆ. ೬ನೇ ಸುತ್ತಿನಲ್ಲಿ ಲಸಿಕೆ ವಿತರಣೆಗಾಗಿ ೫೭ ಸಾವಿರ ಲಸಿಕೆ ಪೂರೈಕೆಯಾಗಿದೆ. ಈಗಾಗಲೇ ೫ನೇ ಸುತ್ತಿನಲ್ಲಿ ೨,೪೫೦ ಲಸಿಕೆ ಉಳಿದಿದ್ದು, ಒಟ್ಟು ೫೯,೪೫೦ ಲಸಿಕೆ ದಾಸ್ತಾನು ಇದೆ ಎಂದು ಲಿಂಗರಾಜು ದೊಡ್ಡಮನಿ ಮಾಹಿತಿ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಪಶು ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ನೀಡಲಿದ್ದಾರೆ. ರೈತರು, ಜಾನುವಾರು ಮಾಲೀಕರು ಜಾನುವಾರುಗಳಿಗೆ ಲಸಿಕೆ ನೀಡಲು ಸಹಕರಿಸುವಂತೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ೨೦ನೇ ಜಾನುವಾರು ಗಣತಿಯಂತೆ ದನ ಹಾಗೂ ಎಮ್ಮೆಗಳ ಸಂಖ್ಯೆ ೭೬,೯೨೦ ಇದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ವಿವರಿಸಿದ್ದಾರೆ.
ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗೆ ಬಂದಾಗ ಸಹಕಾರ ನೀಡಿ ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಕೋರಿದರು.
೬ನೇ ಸುತ್ತಿಗೆ ಈಗಾಗಲೇ ೭೦ ಸಾವಿರ ಸಿರಿಂಜ್ ಪೂರೈಕೆಯಾಗಿದೆ. ಕಾಲುಬಾಯಿ ಲಸಿಕಾ ಕಾರ್ಯಕ್ರಮ ಕೈಗೊಳ್ಳಲು ಜಿಲ್ಲೆಯಲ್ಲಿ ೧೩ ತಾಂತ್ರಿಕ ಅಧಿಕಾರಿಗಳು, ೩೧ ಅರೆ ತಾಂತ್ರಿಕ ಸಿಬ್ಬಂದಿಗಳು, ೭ ಡಿ ದರ್ಜೆ ನೌಕರರು, ೧೩ ಹೊರಗುತ್ತಿಗೆ ನೌಕರರು, ೪ ಮೈತ್ರಿ ಸಿಬ್ಬಂದಿ, ಒಬ್ಬ ಕೆಎಂಎಫ್ ಒಟ್ಟು ೬೯ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಸೀರೋ ಮಾನಿಟರಿಂಗ್ ನಿರ್ವಹಣೆಗಾಗಿ ಸೋಮವಾರಪೇಟೆ ತಾಲೂಕಿನ ಕೆಳಕೊಡ್ಲಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಆಸ್ಪತ್ರೆಗೆ ಭೇಟಿ ನೀಡಬಹುದಾಗಿದೆ ಎಂದು ಲಿಂಗರಾಜು ದೊಡ್ಡಮನಿ ತಿಳಿಸಿದ್ದಾರೆ.