ಜಿಲ್ಲೆ

ಜಿಲ್ಲೆಯಲ್ಲಿ ಕಾಲುಬಾಯಿ ಲಸಿಕಾ ಅಭಿಯಾನ: ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಎಸ್.ಸಿ.ಸುರೇಶ್ ಹೇಳಿಕೆ

ಮಂಡ್ಯ: ಜಿಲ್ಲಾದ್ಯಂತ 7ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಎಸ್.ಸಿ.ಸುರೇಶ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 7ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 4.79 ಲಕ್ಷ ಜಾನುವಾರುಗಳಿದ್ದು, ಮನೆ ಮನೆಗೂ ಭೇಟಿ ನೀಡಿ ಲಸಿಕೆ ಹಾಕುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಮನ್‌ಮುಲ್ ಸಹಯೋಗದೊಂದಿಗೆ ಕಾಲುಬಾಯಿ ಜ್ವರದ ಲಸಿಕೆ ನೀಡಲು ಈಗಾಗಲೇ 469 ಲಸಿಕಾದಾರರನ್ನು ನೇಮಿಸಲಾಗಿದೆ. ಸುಮಾರು ಒಂದೂವರೆ ತಿಂಗಳೊಳಗೆ ಮನೆ ಮನೆ ತೆರಳಿ ಉಚಿತವಾಗಿ ಲಸಿಕೆ ಹಾಕುವ ಯೋಜನೆ ಕೈಗೊಂಡಿದ್ದೇವೆ. ಮನ್‌ಮುಲ್ ಸಿಬ್ಬಂದಿ ವರ್ಗದವರು ಭಾಗಿಯಾಗಲಿದ್ದಾರೆ. ನಮಗೆ ಬೇಕಾದ ಎಲ್ಲ ಮೂಲ ಸೌಕರ್ಯಗಳನ್ನು ನೀಡಲು ಅನುಮತಿ ಸೂಚಿಸಿದ್ದಾರೆ. 7ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಹಾಲು ಉತ್ಪಾದಕ ಸಹಕಾರ ಸಂಘಗಳ ಮೂಲಕ ಪ್ರಚಾರ ಪಡಿಸಲು ನಿರ್ದೇಶನ ನೀಡಲಾಗಿದೆ. ಲಸಿಕಾದಾರರಿಗೆ ಪ್ರಯಾಣ ವೆಚ್ಚವನ್ನು ಮನ್‌ಮುಲ್ ನೀಡಲಿದೆ ಎಂದು ವಿವರಿಸಿದರು.

ಮನ್‌ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಮಂಜೇಶ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ 6 ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಮುಂದೆಯೂ ಮನ್‌ಮುಲ್ನಿಂದ ಲಸಿಕಾ ಕಾರ್ಯಕ್ರಮಕ್ಕೆ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು. ಇದೇ ವೇಳೆ 7ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಪೋಸ್ಟರ್ ಬಿಡುಗಡೆ ಮಾಡಲಾಯಿತು.