ತುಮಕೂರು: ಜಿಲ್ಲೆಯ ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಜ.3 ರಿಂದ ಕರೊನಾ ಲಸಿಕೆ ನೀಡಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾಧರ್ ಹೇಳಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪಿಯು ಕಾಲೇಜುಗಳ ಪ್ರಾಚಾರ್ಯರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕರೊನಾ ಲಸಿಕೆ ಪಡೆಯಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು. ಜತೆಗೆ ಪಾಲಕರ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಪಡೆದು, ಮೊಬೈಲ್ ಸಂಖ್ಯೆ ನಮೂದಿಸಿ ಲಸಿಕೆ ಹಾಕಿಸಬೇಕು ಎಂದರು.
ಪ್ರಸ್ತುತ ಸನ್ನಿವೇಶದಲ್ಲಿ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಸುರಕ್ಷತೆಗೆ ಒತ್ತುಕೊಡುವಂತೆ ಸಲಹೆಗಳನ್ನು ನೀಡಬೇಕು. ಕರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕ್ರಮವಹಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ತಿಳಿಹೇಳಬೇಕು ಎಂದು ತಿಳಿಸಿದರು.
ಕರೊನಾಕ್ಕೆ ಓರ್ವ ಬಲಿ: ತುರುವೇಕೆರೆ ತಾಲೂಕಿನ 65 ವರ್ಷದ ವೃದ್ಧ ಕರೊನಾದಿಂದ ಬುಧವಾರ ಸಾವನ್ನಪ್ಪಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 1139ಕ್ಕೇರಿದೆ. ಇನ್ನೂ ಒಂದೇ ದಿನ 8 ಪ್ರಕರಣ ದೃಢವಾಗಿವೆ. ತುಮಕೂರು ತಾಲೂಕಿನಲ್ಲಿ 4, ತಿಪಟೂರು-2 ಹಾಗೂ ತುರುವೇಕೆರೆ, ಕುಣಿಗಲ್ ತಾಲೂಕಿನಲ್ಲಿ ತಲಾ ಓರ್ವರಲ್ಲಿ ಸೋಂಕು ಪತ್ತೆಯಾಗಿದೆ. 93 ಸಕ್ರಿಯ ಪ್ರಕರಣಗಳಿದ್ದು ಐವರು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.