ಚಿತ್ರದುರ್ಗ: ಜಗತ್ತಿಗೆ ಸನ್ಮಾರ್ಗ ತೋರಿದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.28ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಆಯೊಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 10ಕ್ಕೆ ಕೋಟೆ ಬಳಿಯಿಂದ ತರಾಸು ರಂಗಮಂದಿರದವರೆಗೆ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ, ಮಧ್ಯಾಹ್ನ 12ಕ್ಕೆ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿವೆ ಎಂದರು.
ಡೊಳ್ಳು, ವೀರಗಾಸೆ, ಖಾಸಾ ಬೇಡರ ಪಡೆ ಸೇರಿ ವಿವಿಧ ಕಲಾ ತಂಡಗಳು ಇರಲಿವೆ. ಉಪನ್ಯಾಸ, ಗೀತ ಗಾಯನದೊಂದಿಗೆ ಸಮಾರಂಭದಲ್ಲಿ ಸಮುದಾಯದ ಸಾಧಕರಿಗೆ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಎಲ್ಲರನ್ನೂ ಒಳಗೊಂಡಂತೆ ಆಚರಿಸಬೇಕಿದೆ. ವಿವಿಧ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕಿದೆ. ಭಾಷಣ, ಪ್ರಬಂಧ, ಉಪನ್ಯಾಸ ಮಾಲಿಕೆ ಮೂಲಕ ವಾಲ್ಮೀಕಿ ಕುರಿತಂತೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜೆಸಿಆರ್ ಬಡಾವಣೆಯಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಲಿಡ್ಕರ್ ಭವನಕ್ಕೆ ಸ್ಥಳಾಂತರಿಸುವಂತೆ ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಮನವಿ ಮಾಡಿದರು. ವಾರದೊಳಗೆ ಸ್ಥಳಾಂತರಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಒ.ಪರಮೇಶ್ವರಪ್ಪ ಅವರಿಗೆ ಎಡಿಸಿ ಸೂಚಿಸಿದರು.
ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ನಗರಸಭೆ ಆಯುಕ್ತೆ ಎಂ.ರೇಣುಕಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ಜಿಲ್ಲಾ ನಾಯಕ ನೌಕರರ ಸಂಘದ ಅಧ್ಯಕ್ಷ ಡಾ.ಎಚ್.ಗುಡ್ಡದೇಶ್ವರಪ್ಪ, ಮುಖಂಡರಾದ ರಾಜಾ ಮದಕರಿನಾಯಕ, ಗೋಪಾಲಸ್ವಾಮಿ ನಾಯಕ, ಎಸ್.ಸಂದೀಪ್ ಮತ್ತಿತರರು ಇದ್ದರು.