ವಿಜಯವಾಣಿ ಸುದ್ದಿಜಾಲ ಬೆಂ.ಗ್ರಾಮಾಂತರ
ದೇವನಹಳ್ಳಿ ತಾಲೂಕಿನ ವಾಲ್ಮೀಕಿ ಭವನದ ವಿವಿಧ ಕಾಮಗಾರಿಗಳಿಗೆ 1.91 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದು, ಭವನದ ಕಾಪೌಂಡ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ವರ್ಷದೊಳಗೆ ಕಾಮಗಾರಿ ಮುಕ್ತಾಯಗೊಳಿಸಿ ಬಳಕೆಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ದೇವನಹಳ್ಳಿ ಟೌನ್‌ನಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿದರು. ತಾಲೂಕಿನ ಹುರುಳುಗುರ್ಕಿ ಬಳಿ ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಈಗಾಗಲೇ 7 ಎಕರೆ ಜಾಗ ಗುರುತಿಸಲಾಗಿದ್ದು, ಈ ಜಾಗಕ್ಕೆ ಕಾಂಪೌಂಡ್ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ದೊರಕಿಸಿಕೊಡಲಾಗಿದೆ, ಈಗಾಗಲೇ 6 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಬಾಲಕಿಯರ ವಸತಿ ಶಾಲೆಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ವೆಂಕಟಗಿರಿಕೋಟೆ ಪಂಚಾಯತಿ ವ್ಯಾಪ್ತಿಯಲ್ಲಿ ವಾಲ್ಮೀಕಿ ಸಂಶೋಧನಾ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡಿಸುವುದಾಗಿ ಹೇಳಿದರು.
ಅಭಿವೃದ್ಧಿಗೆ ಸರ್ಕಾರ ಒತ್ತು: ರಾಜ್ಯದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡುತ್ತಿದೆ. ಗುಣಮಟ್ಟದ ಶಿಕ್ಷಣದ ಜತೆಗೆ ಮಕ್ಕಳ ಸರ್ಮೋತೋಮುಖ ಅಭಿವೃದ್ಧಿ ಕನಸು ಕಂಡಿದ್ದೇವೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ ನೀಡಿ, ಮಕ್ಕಳಿಗೆ ಪ್ರೋತ್ಸಾಹಿಸುವ ಜತೆಗೆ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದೇವೆ ಎಂದು ಸಚಿವರು ಹೇಳಿದರು.
ಮಹಾನ್ ಕಾಲಜ್ಞಾನಿ: ಶ್ರೀ ಮಹರ್ಷಿ ವಾಲ್ಮೀಕಿ ಅವರು ಮಹಾನ್ ಕಾಲಜ್ಞಾನಿಯಾಗಿದ್ದರು, ಅವರು ನಡೆದ ಹಾದಿ ನಮ್ಮೆಲ್ಲರಿಗೂ ಮಾರ್ಗದರ್ಶನವಾಗದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ಸಚಿವರು ಕರೆ ನೀಡಿದರು. ವಾಲ್ಮೀಕಿ ಮಹರ್ಷಿಗಳು ವಿಶ್ವಕ್ಕೆ ಅತಿದೊಡ್ಡ ಕಾವ್ಯವಾದ ರಾಮಾಯಣ ಎಂಬ ಮಹತ್ವದ ಕೊಡುಗೆ ನೀಡಿದ್ದಾರೆ. ಪ್ರತಿಯೊಬ್ಬರು ವಾಲ್ಮೀಕಿ ಅವರ ಆದರ್ಶ ಜೀವನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.
ಹಕ್ಕುಪತ್ರ ವಿತರಣೆ:
ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡದ 104 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜೀವನಾರ್ದಶಗಳ ಕುರಿತು ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ ವಿಶೇಷ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರು ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಮಹರ್ಷಿ ವಾಲ್ಮಿಕಿ ಭವನದವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆ ಜರುಗಿತು. ವಿವಿಧ ಗ್ರಾಮಪಂಚಾಯತಿಗಳಿಂದ ಬಂದಿದ್ದ ವಾಲ್ಮೀಕಿಯವರ ಭಾವಚಿತ್ರಗಳನ್ನು ಹೂವಿನ ಪಲ್ಲಕ್ಕಿಗಳಲ್ಲಿಟ್ಟು ಮೆರವಣಿಗೆ ಮೂಲಕ ಭವನಕ್ಕೆ ತರಲಾಯಿತು.