ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಕೃಷಿ ಇಲಾಖೆಯ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
ಕೃಷಿ ಇಲಾಖೆಯ ಅಧಿಕಾರಿ ವಿನಯ್ ಹಾಗೂ ಗುತ್ತಿಗೆ ನೌಕರ ಲೋಕೇಶ್ ಸಾವಿಗೀಡಾದವರು. ಕೃಷಿ ಸಚಿವರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಇವರು ಮರಳಿ ಹೋಗುವಾಗ ಅಪಘಾತ ಸಂಭವಿಸಿದೆ.
ಚಿಂತಾಮಣಿಯಿಂದ ಚಿಕ್ಕಬಳ್ಳಾಪುರಕ್ಕೆ ಬಂದಿದ್ದ ಇವರು, ಕಾರ್ಯಕ್ರಮ ಮುಗಿಸಿ ವಾಪಸ್ ಹೋಗುವಾಗ ಶಿಡ್ಲಘಟ್ಟದ ಪಿಂಡಿಪಾಪನಹಳ್ಳಿ ಗೇಟ್ ಬಳಿ ಅಪರಿಚಿತ ವಾಹನವೊಂದು ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.