ಮೈಸೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳಕ್ಕೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧವಿಲ್ಲ. ಪ್ರತಿಪಕ್ಷದವರು ಈ ವಿಚಾರವಾಗಿ ಅನಗತ್ಯ ಟೀಕೆ ಮಾಡುತ್ತಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆರೋಜ್ ಖಾನ್ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ 4 ಕೋಟಿಗೂ ಹೆಚ್ಚು ಜನರು ರಾಜ್ಯ ಸರ್ಕಾರದ ಒಂದಲ್ಲಾ ಒಂದು ಗ್ಯಾರಂಟಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಈ ಯೋಜನೆಯಿಂದ ರಾಜ್ಯ ಆರ್ಥಿಕವಾಗಿ ದಿವಾಳಿ ಆಗುತ್ತದೆ ಎಂದು ಪ್ರತಿಪಕ್ಷದವರು ಟೀಕಿಸುತ್ತಿದ್ದಾರೆ. ಆದರೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಡದಂತೆ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಗ್ಯಾರಂಟಿ ಯೋಜನೆಯಿಂದ ಸಾರಿಗೆ ಸಂಸ್ಥೆ 3,900 ಕೋಟಿ ರೂ. ಲಾಭ ಗಳಿಸಿದೆ. ಜನರ ಭೇಟಿಯಿಂದ ದೇವಸ್ಥಾನಗಳು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆ ಉತ್ತಮವಾಗಿದೆ. ಈ ಯೋಜನೆಗಳಿಂದ ರಾಜ್ಯದಲ್ಲಿ ಸಂಗ್ರಹವಾಗುತ್ತಿರುವ ಜಿಎಸ್‌ಟಿ ಪ್ರಮಾಣ ಏರಿಕೆಯಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ವಿವಿಧ ತೆರಿಗೆ ಏರಿಕೆ ಸಹಜವಾದ ಪ್ರಕ್ರಿಯೆ. ಯಾವುದೇ ಸರ್ಕಾರವಾದರೂ ಕಾಲಕಾಲಕ್ಕೆ ತೆರಿಗೆ ಹೆಚ್ಚಳ ಮಾಡುತ್ತದೆ. ಸರ್ಕಾರ ಗ್ಯಾರಂಟಿ ಯೋಜನೆಗೋಸ್ಕರ ಎಲ್ಲೂ ತೆರಿಗೆ ಏರಿಕೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣ ಇಲ್ಲ ಎಂಬ ಕಾರಣಕ್ಕೆ ತೆರಿಗೆ ಹೆಚ್ಚಳ ಮಾಡಲಾಗುತ್ತಿದೆ ಎಂಬ ಆರೋಪ ಸರಿಯಲ್ಲ. ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ತೆರಿಗೆ ಮೂಲಕ ಆದಾಯ ಕ್ರೋಢೀಕರಣ ಮಾಡುತ್ತಿರುವುದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ಅಲ್ಲ. ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗುವುದು ಎಂದರು.
ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗ್ಯಾರಂಟಿ ಯೋಜನೆಗಳನ್ನು ಪುನರಾವಲೋಕನ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಮನಸ್ಸಿನಲ್ಲಿ ಯಾವ ವಿಚಾರ ಇಟ್ಟುಕೊಂಡು ಹೇಳಿದ್ದಾರೋ ಗೊತ್ತಿಲ್ಲ. ಯೋಜನೆ ಪುನರಾವಲೋಕನ ಮಾಡುವ ಅವಶ್ಯಕತೆ ಇಲ್ಲ. ಇದು ಚುನಾವಣೆಗೋಸ್ಕರ ರೂಪಿಸಿದ ಯೋಜನೆಯಲ್ಲ, ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಚುನಾವಣಾ ನೀತಿ ಸಂಹಿತೆ ಕಾರಣಕ್ಕಾಗಿ ಗ್ಯಾರಂಟಿ ಯೋಜನೆ ಹಣ ಪಾವತಿಯಲ್ಲಿ ವಿಳಂಬವಾಗಿರಬಹುದು. ಸದ್ಯದಲ್ಲಿಯೇ ಪಾವತಿಯಾಗಲಿದೆ ಎಂದರು.