ಬೆಳಗಾವಿ: ವಿಧಾನಸಭೆ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರಿಂದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು, ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. ಅವರು ನಗರಕ್ಕೆ ಆಗಮಿಸುತ್ತಿದ್ದಂತೆ ಅವರ ಮೇಲೆ ಪುಷ್ಪವೃಷ್ಟಿಗೈದು, ಬೃಹತ್ ಹೂವಿನ ಹಾರ ಹಾಕಿ ಸ್ವಾಗತಿಸಿದರು. ಕಾರ್ಯಕರ್ತರು ಸತೀಶ್ ಅವರಿಗೆ ಜಯಘೋಷಗಳನ್ನು ಕೂಗಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಕೆಲ ಕಾರ್ಯಕರ್ತರು ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಘೋಷಣೆಗಳನ್ನು ಕೂಗಿದರು.
ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ, ಜಿಪಂ ಮಾಜಿ ಸದಸ್ಯ ಸಿದ್ದು ಸುಣಗಾರ, ರಾಜಾಸಲೀಂ ಕಾಶಮ್ಮನವರ, ಪ್ರದೀಪ ಎಂ.ಜೆ., ಅನಂತಕುಮಾರ ಬ್ಯಾಕೋಡ, ಪ್ರಭಾವತಿ ಚವಡಿ, ಆಯಿಸಾ ಸನದಿ, ಮಹಾವೀರ ಮೋಹಿತೆ, ಬಾಳೇಶ ದಾಸನಟ್ಟಿ, ರಾಜದೀಪ ಕೌಜಲಗಿ, ಮಲಗೌಡ ಪಾಟೀಲ, ಸಯ್ಯದ ಮನ್ಸೂರ, ನಜೀರ್ ಶೇಖ ಇತರರಿದ್ದರು.
ಬಾಕ್ಸ್...1
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿರುವ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಶನಿವಾರ ಕಾಂಗ್ರೆಸ್ ಭವನದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚದುರಿ ಹೋಗಿದ್ದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟಿಸಿದ್ದರಿಂದ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾರಣವಾಯಿತು. ಕ್ಷೇತ್ರದಲ್ಲಿ 5-6 ತಿಂಗಳಲ್ಲಿ ನೆಲೆಯೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಂತ್ರಗಾರಿಕೆಯಿಂದ ಪ್ರಚಾರ ನಡೆಸಲಾಗಿದೆ. ಅಹಿಂದ ಮತಗಳನ್ನು ಕ್ರೂಢೀಕರಿಸಲಾಯಿತು. ಅಹಿಂದ ಸೇರಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದರಿಂದ ಈ ಗೆಲುವು ಸಾಧ್ಯವಾಗಿದೆ. ಈ ಗೆಲುವಿನಿಂದ ನಮಗೆ ಮತ್ತಷ್ಟು ಆತ್ಮವಿಶ್ವಾಸ ಬಂದಿದೆ ಎಂದರು. ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.