ಚಿಕ್ಕಮಗಳೂರು: ೨೦೨೪-೨೫ನೇ ಸಾಲಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತುಗಳ ಬಗ್ಗೆ ಮುಂಜಾಗ್ರತಾ ಕ್ರಮ ಹಾಗೂ ಪರಿಹಾರ ಕ್ರಮಗಳ ಕುರಿತು ಇಂದು ಇಂಧನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ವಿಡಿಯೋ ಕೇಂದ್ರದ ಮೂಲಕ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಆಗಿರುವ ಮಳೆ ಮತ್ತು ಇತರೆ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ವೇಳೆ ವೀಡಿಯೋ ಕಾನ್ಫರೆನ್ಸ್ನಲ್ಲಿ ಡಿಸಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಮಳೆ ಬೀಳುವ ಪ್ರದೇಶಗಳಲ್ಲಿ ಹಾಗೂ ಇತರೆ ಭಾಗಗಳಲ್ಲಿಯೂ ಕೂಡ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ರಸ್ತೆ ಬದಿಯ ಮರಗಳನ್ನು ತೆರವುಗೊಳಿಸುವುದು ಸೇರಿದಂತೆ ರಸ್ತೆಗಳ ಮೇಲೆ ಮಳೆ ನೀರು ಹರಿಯದಂತೆ ವೈಜ್ಞಾನಿಕವಾಗಿ ಚರಂಡಿ ತೆಗೆದು ಸಮರ್ಪಕವಾಗಿ ನೀರು ಹೊರ ಹೋಗಲು ಕ್ರಮಕೈಗೊಳ್ಳಬೇಕು ಎಂದು ಪಿಡಬ್ಲೂö್ಯಡಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಹಾಗೂ ಎಲ್ಲ ತಾಲೂಕು ಮತ್ತು ಗ್ರಾಪಂ ವ್ಯಾಪ್ತಿಯಲ್ಲಿಯೂ ಕೂಡ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಬೇಕು. ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ಔಷಧ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳು ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಹಿಡಿದು ಗ್ರಾಮ ಮಟ್ಟದ ಅಧಿಕಾರಿಗಳ ತನಕ ೨೪/೭ ಗಂಟೆ ಕೆಲಸ ಮಾಡಲು ಸಿದ್ಧರಾಗಿರಬೇಕು ಎಂದು ಸೂಚನೆ ನೀಡಿದರು.
ಗ್ರಾಮ ಮಟ್ಟದಲ್ಲಿ ಹೆಚ್ಚಿನ ಅನಾಹುತ ಕಂಡು ಬಂದಲ್ಲಿ ತಕ್ಷಣ ಮೇಲಧಿಕಾರಿಗಳಿಗೆ ಅಥವಾ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅತೀವೃಷ್ಟಿ ಸಂದರ್ಭದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಮೆಸ್ಕಾಂ, ಅರಣ್ಯ, ಪಿಡಬ್ಲೂö್ಯಡಿ, ಪಿಆರ್‌ಇಡಿ, ಪಶುಸಂಗೋಪನೆ ಇಲಾಖೆ, ಕೃಷಿ, ತೋಟಗಾರಿಕೆ, ಮತ್ತಿತರ ಇಲಾಖೆಗಳು ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಮಳೆಗಾಲದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಚಿವರಿಗೆ ವಿವರಿಸಿ ೨೦೨೪ನೇ ಸಾಲಿನ ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರದ ಸಭೆಗಳನ್ನು ನಡೆಸಲಾಗಿದೆ ಎಂದರು.
ವಿಪತ್ತು ನಿರ್ವಹಣೆಯ ಸಮರ್ಪಕ ನಿರ್ವಹಣೆಗಾಗಿ ಜಿಲ್ಲೆಯಲ್ಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ನಾಲ್ಕು ವರ್ಷಗಳ ಸಾಲಿನ ಅತೀವೃಷ್ಟಿಯಿಂದ ಉಂಟಾದ ಭೂಕುಸಿತ ಹಾಗೂ ಹಾನಿಗಳ ಆಧಾರದ ಮೇರೆಗೆ ಈಗಾಗಲೇ ಜಿಲ್ಲೆಯಲ್ಲಿ ಅಂತಹ ಪ್ರದೇಶಗಳನ್ನು ಗುರುತಿಸಿ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಲಾಗಿದೆ ಎಂದು ವಿವರಿಸಿದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ವಿಪತ್ತಿನ ಸಮಯದಲ್ಲಿ ಸಂತ್ರಸ್ತರನ್ನು ಸ್ಥಳಾಂತರಿಸಲು ಸುಸ್ಥಿತಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಇದಕ್ಕೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. ಎನ್‌ಡಿಆರ್‌ಎಫ್‌ನಿಂದ ತರಬೇತಿ ಪಡೆದ ಜಿಲ್ಲೆಯಲ್ಲಿರುವ ಸ್ವಯಂ ಸೇವಕರನ್ನು ಗುರುತಿಸಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ಪೋರ್ಸ್ ಸಮಿತಿಗಳಿಗೆ ವಿಪತ್ತು ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕುರಿತು ತರಬೇತಿಯನ್ನು ಸಹ ನೀಡಲಾಗಿದೆ. ವಿವಿಧ ಇಲಾಖೆಗಳಲ್ಲಿರುವ ವಿಪತ್ತು ನಿರ್ವಹಣಾ ಸಾಮಾಗ್ರಿಗಳ ಮಾಹಿತಿ ಪಡೆಯಲಾಗಿದೆ ಎಂದರು.
ಈಗಾಗಲೇ ರಸ್ತೆ ಬದಿಯಲ್ಲಿರುವ ಬೀಳುವ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸು ಅರಣ್ಯ ಇಲಾಖೆಗೆ ತಿಳಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ೨೪/೭ ಕಂಟ್ರೋಲ್ ರೂಂ ತೆರಯಲಾಗಿದೆ. ವಿಪತ್ತು ನಿರ್ವಹಣೆಗೆ ಅವಶ್ಯವಿರುವ ಎಲ್ಲ ರೀತಿಯ ಉಪಕರಣಗಳನ್ನು ವ್ಯವಸ್ಥೆ ಮಾಡಿ ಅವಶ್ಯವಿರುವ ವೈದ್ಯಕೀಯ ಉಪಕರಣಗಳು, ಔಷಧ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಇಲ್ಲಿಯವರೆಗೂ ಮಳೆಯಿಂದಾಗಿ ಎರಡು ಜಾನುವಾರುಗಳು, ಎರಡು ಜನ ಮರ ಬಿದ್ದು ಸಾವನ್ನಪ್ಪಿದ್ದಾರೆ. ಓರ್ವರು ಸಿಡಿಲು ಬಡಿದು ಮೃತಪಟ್ಟಿದ್ದು, ಓರ್ವರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಸ್ವಲ್ಪ ಮಟ್ಟಿನ ಹಾನಿಯಾಗಿದ್ದು, ಇವುಗಳ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ. ಕೃಷಿ ತೋಟಗಾರಿಕೆ ಬೆಳೆಗಳಿಗೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಹಾಗೂ ಎಂಆರ್‌ಪಿ ದರದಲ್ಲಿ ಮಾರಾಟ ಮಾಡಲು ಮತ್ತು ಯಾವುದೇ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ಎಲ್ಲಾ ತಾಲೂಕುಗಳ ತಹಸೀಲ್ದಾರ್ ಅವರ ಪಿಡಿ ಖಾತೆಯಲ್ಲಿ ೩೫೦.೭೭ ಲಕ್ಷ ರೂ. ಸೇರಿದಂತೆ ಮತ್ತು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ೬.೯ ಕೋಟಿ ರೂ. ಹಣ ಮೀಸಲಿರಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಳೆ ಹೆಚ್ಚಾದ ಪ್ರದೇಶಗಳಲ್ಲಿ ಒಟ್ಟು ೧೬ ಸೇತುವೆಗಳು ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡು ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಗುರುತಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಲೆನಾಡು ಭಾಗದಲ್ಲಿ ಪಿಆರ್‌ಇಡಿ ಇಲಾಖೆಯಿಂದ ೪೮ ಕಾಲು ಸುಂಕಗಳನ್ನು ಹಾಗೂ ಪಿಡಬ್ಲೂö್ಯಡಿ ಇಲಾಖೆಯಿಂದ ೧೮೦ ಕಾಲು ಸುಂಕಗಳಿಗೆ ಸಾರ್ವಜನಿಕರ ಬೇಡಿಕೆಗಳಿದ್ದು, ಇವುಗಳನ್ನು ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಡೆಂಘೆ ಮತ್ತಿತರ ರೋಗಗಳಿಗೆ ಸಂಬAಧಿಸಿದAತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಎಸ್‌ಪಿ ವಿಕ್ರಮ್ ಅಮಟೆ, ಎಡಿಸಿ ನಾರಾಯಣರಡ್ಡಿ ಕನಕರಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.