ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಪಂ ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಆರೋಗ್ಯ ತಪಾಸಣಾ ಮಾಡಿಸಿಕೊಂಡರು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ರೋಟರಿ ಕ್ಲಬ್ ಆಫ್ ಹಂಪಿ ಪರ್ಲ್ಸ್ ನ ಅಧ್ಯಕ್ಷೆ ಅನ್ನಪೂರ್ಣ ಸದಾಶಿವ, ಕಾರ್ಯದರ್ಶಿ ದೀಪಾ ಅಗರ್ವಾಲ್ ಇತರರಿದ್ದರು.
- ಆರೋಗ್ಯ ತಪಾಸಣಾ ಶಿಬಿರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿಕೆ
ಹೊಸಪೇಟೆ: ಸಾರ್ವಜನಿಕ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಒತ್ತಡದ ಬದುಕಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಘ ಹಾಗೂ ರೋಟರಿ ಕ್ಲಬ್ ಆಫ್ ಹಂಪಿ ಪರ್ಲ್ಸ್ಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೆಳಗ್ಗೆಯಿಂದ ಸಂಜೆಯವರೆಗೆ ಸಾರ್ವಜನಿಕರ ಅಹವಾಲು ಆಲಿಸುವುದು, ಕಡತಗಳ ವಿಲೇವಾರಿ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದಂತಹ ದೈನಂದಿನ ಒತ್ತಡದ ಕೆಲಸದ ನಡುವೆ ನೌಕರರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸುವುದನ್ನೇ ಮರೆತುಬಿಡುತ್ತಾರೆ. ಆದ್ದರಿಂದ ಆರೋಗ್ಯ ಕೈಕೊಟ್ಟಾಗ ಆಸ್ಪತ್ರೆಗೆ ಓಡುವುದಕ್ಕಿಂತ, ಮುಂಜಾಗ್ರತೆಯಾಗಿ ವರ್ಷಕ್ಕೊಮ್ಮೆಯಾದರೂ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಇಂತಹ ಉಚಿತ ಶಿಬಿರಗಳನ್ನು ಕೇವಲ ಔಪಚಾರಿಕ ಎನ್ನದೆ, ಪ್ರತಿಯೊಬ್ಬ ಮುಂಚೂಣಿ ಸಿಬ್ಬಂದಿಯೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಜಿಲ್ಲಾಡಳಿತದ ಯಶಸ್ಸು ಸಿಬ್ಬಂದಿ ವರ್ಗದ ಕಾರ್ಯದಕ್ಷತೆಯ ಮೇಲೆ ನಿಂತಿರುತ್ತದೆ. ಸಿಬ್ಬಂದಿಗಳು ಆರೋಗ್ಯವಾಗಿದ್ದರೆ ಮಾತ್ರ ಜಿಲ್ಲೆಯ ಪ್ರಗತಿ ಸಾಧ್ಯ ಎಂದರು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹಾಗೂ ಜಿಪಂ ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಆರೋಗ್ಯ ಮತ್ತು ಕಣ್ಣಿನ ತಪಾಸಣೆಯಲ್ಲಿ ಭಾಗಿಯಾದರು. ಆರೋಗ್ಯ ತಪಾಸಣಾ ಶಿಬಿರದಲ್ಲಿ ರೋಟರಿ ಕ್ಲಬ್ ಆಫ್ ಹಂಪಿ ಪರ್ಲ್ಸ್ ನ ಅಧ್ಯಕ್ಷೆ ಅನ್ನಪೂರ್ಣ ಸದಾಶಿವ, ಕಾರ್ಯದರ್ಶಿ ದೀಪಾ ಅಗರ್ವಾಲ್ ಇತರರಿದ್ದರು.