ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ, ಎಸ್ಪಿ ಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಿ.ಶಶಿಕಲಾ ಇತರರಿದ್ದರು. 
ವಿಜಯನಗರ

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು

ಪ್ರಮುಖ ಮುಖ್ಯಾಂಶಗಳು

  • ಕನ್ನಡ ವಿವಿ ಪ್ರಾಧ್ಯಾಪಕ ಡಾ.ಎಫ್.ಟಿ.ಹಳ್ಳಿಕೇರಿ ಪ್ರತಿಪಾದನೆ
ಹೊಸಪೇಟೆ: ದೀನದಲಿತರ, ಹಿಂದುಳಿದ ವರ್ಗಗಳ ಹಾಗೂ ಗ್ರಾಮೀಣ ಭಾಗದ ಜನರ ನೈಜ ಸಮಸ್ಯೆಗಳನ್ನು ಹತ್ತಿರದಿಂದ ಕಂಡು ಬೆಳೆದ ಡಿ.ದೇವರಾಜ ಅರಸು ಅವರು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಸಾಮಾಜಿಕ ನ್ಯಾಯದ ಹರಿಕಾರರಾಗಿ ಗುರುತಿಸಿಕೊಂಡಿದ್ದಾರೆ ಎಂದು ಕನ್ನಡ ವಿವಿ ಪ್ರಾಧ್ಯಾಪಕ ಡಾ.ಎಫ್.ಟಿ.ಹಳ್ಳಿಕೇರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಅರಸು ಅವರು ಕೇವಲ ರಾಜಕಾರಣಿಯಾಗಿರದೆ ಬಡವರು, ರೈತರು, ದಲಿತರು, ಹಿಂದುಳಿದವರು ಮತ್ತು ಅವಕಾಶವಂಚಿತರ ಬದುಕಿನಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಶ್ರಮಿಸಿದ ಜನಪರ ನಾಯಕ. 1952ರಲ್ಲಿ ಹುಣಸೂರು ಕ್ಷೇತ್ರದಿಂದ ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ಸಕ್ರಿಯ ರಾಜಕೀಯ ಪ್ರವೇಶಿಸಿದ ಅವರು, 1972ರಲ್ಲಿ ಮುಖ್ಯಮಂತ್ರಿಯಾಗಿ ರಾಜ್ಯದ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮಹತ್ವದ ಮನ್ವಂತರಕ್ಕೆ ನಾಂದಿ ಹಾಡಿದರು ಎಂದು ಸ್ಮರಿಸಿದರು.
ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಮಹದೋದ್ದೇಶದಿಂದ ವಿದ್ಯಾರ್ಥಿನಿಲಯ, ಉಚಿತ ವಸತಿ-ಊಟದ ವ್ಯವಸ್ಥೆಯನ್ನು ಜಾರಿಗೆ ತಂದರು. 1973ರ ನ.೦1ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದ ಹೆಗ್ಗಳಿಕೆ ಇವರದ್ದು. ಅಷ್ಟೇ ಅಲ್ಲದೆ, ಉಳುವವನೇ ಭೂಮಿಯ ಒಡೆಯ ಎಂಬ ಐತಿಹಾಸಿಕ ಭೂಸುಧಾರಣಾ ಕಾಯ್ದೆಯ ಮೂಲಕ ರಾಜ್ಯದ ಸುಮಾರು 4 ಲಕ್ಷ ಗೇಣಿದಾರರಿಗೆ ಭೂಮಾಲೀಕತ್ವ ಒದಗಿಸಿಕೊಟ್ಟ ಧೀಮಂತ ನಾಯಕ ಎಂದು ಶ್ಲಾಘಿಸಿದರು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ದಿವಂಗತ ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಶೋಷಿತ ವರ್ಗಗಳಿಗೆ ಆಡಳಿತಾತ್ಮಕ ಶಕ್ತಿ ತುಂಬಿದ ದೂರದೃಷ್ಟಿಯ ನಾಯಕರು. ಅವರ ಜನಪರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪ ಎಂದರು.