ಹೊಸಪೇಟೆ ವಡಕರಾಯನ ದೇಗುಲದ ಬಳಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಹಸಿರು ನಿಶಾನೆ ತೋರುವ ಮೂಲಕ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮಕ್ಕೆ ಮಂಗಳವಾರ ಸಂಜೆ ಚಾಲನೆ ನೀಡಿದರು. ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ತಹಸೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ್ರ್, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್ ಇತರರಿದ್ದರು. 
ವಿಜಯನಗರ

ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿಯೊಬ್ಬರೂ ಪಾಲ್ಗೊಳ್ಳಿ

ಪ್ರಮುಖ ಮುಖ್ಯಾಂಶಗಳು

  • ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಕರೆ
ಹೊಸಪೇಟೆ: ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರತಿಯೊಬ್ಬ ಅರ್ಹ ನಾಗರಿಕರ ಮತದಾನ ಅತ್ಯಗತ್ಯ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಜಾಥಾಕ್ಕೆ ನಗರದ ವಡಕರಾಯನ ದೇಗುಲದ ಬಳಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಜವಾಬ್ದಾರಿ. ವಿಶೇಷ ಪರಿಷ್ಕರಣೆ ಅಭಿಯಾನದಡಿ ಹೊಸದಾಗಿ 18 ವರ್ಷ ತುಂಬಿದ ಯುವಕ-ಯುವತಿಯರು ಮತ್ತು ಬಿಟ್ಟುಹೋದ ಅರ್ಹರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು. ಈ ನಿಟ್ಟಿನಲ್ಲಿ ಆಡಳಿತ ಯಂತ್ರವು ಮನೆ ಮನೆಗೆ ತೆರಳಿ ಮಾಹಿತಿ ನೀಡುತ್ತಿದೆ. ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಂಡು ಮತದಾನದ ಮಹತ್ವವನ್ನು ಅರಿಯಬೇಕು ಎಂದರು.
ನಗರದ ವಡಕರಾಯನ ದೇಗುಲದಿಂದ ಆರಂಭವಾದ ಈ ಜಾಥಾವು ಪಂಚಮುಖಿ ಆಂಜನೇಯ ದೇಗುಲ, ದೊಡ್ಡ ಮಸೀದಿ, ಗಾಂಧಿ ಚೌಕ್, ಪುಣ್ಯಮೂರ್ತಿ ವೃತ್ತ ಹಾಗೂ ಬಸ್ ನಿಲ್ದಾಣದ ಮೂಲಕ ಸಾಗಿ ಪುನೀತ್ ರಾಜಕುಮಾರ್ ವೃತ್ತದಲ್ಲಿ ಸಮಾರೋಪಗೊಂಡಿತು. ಜಾಥಾದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿ, ಮತದಾನದ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗಿದರು.