ಅಪ್ಸರ್ ಕೊಡ್ಲಿಪೇಟೆ 
ವಿಜಯನಗರ

ಲಾಕಪ್ ಡೆತ್ ಪ್ರಕರಣ ನ್ಯಾಯಾಂಗ ತನಿಖೆ ಮಾಡಿಸಿ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಎಸ್.ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಒತ್ತಾಯ
ಹೊಸಪೇಟೆ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಕಟ್ಟಡ ಕಾರ್ಮಿಕ ಸಿ.ಖಲೀಲುಲ್ಲಾ ಅವರ ಲಾಕಪ್ ಡೆತ್ ಪ್ರಕರಣವು ಖಂಡನೀಯ ಹಾಗೂ ಸಂವಿಧಾನಾತ್ಮಕ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿಪಿಐ) ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆರೋಪಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಠಾಣೆಗೆ ರಕ್ಷಣೆ ಅರಸಿ ಹೋಗುವ ನಾಗರಿಕರು ಜೀವ ಕಳೆದುಕೊಳ್ಳುವ ವಾತಾವರಣ ನಿರ್ಮಾಣವಾಗಿರುವುದು ಆತಂಕಕಾರಿ. ಪ್ರಕರಣದ ಬಗ್ಗೆ ಅದೇ ಇಲಾಖೆ ಅಥವಾ ಸಿಐಡಿ ತನಿಖೆ ನಡೆಸಿದರೆ ನಂಬಿಕೆಯಿಲ್ಲ. ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತಕ್ಷಣವೇ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕು. ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು. ಇಬ್ಬರು ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾಡಳಿತವೇ ವಹಿಸಿಕೊಳ್ಳಬೇಕು ಒತ್ತಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಅಥವಾ ಸರ್ಕಾರವಾಗಲಿ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡದಿರುವುದನ್ನು ಖಂಡಿಸಿದ ಅವರು, ಬಾಧಿತ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಎಸ್ ಡಿ ಪಿಐ ನಿರಂತರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.