ಹೊಸಪೇಟೆ ಪುನೀತ್ ರಾಜಕುಮಾರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್, ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಸಿಂಗ್ ಹಾಗೂ ಮುಖಂಡರಾದ ಅಶೋಕ ಜೀರೆ ಇತರರಿದ್ದರು. 
ವಿಜಯನಗರ

ಕಾಂಗ್ರೆಸ್‌ ಗೂಂಡಾ ವರ್ತನೆ ಕೊನೆಯಾಗಿಲಿ

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆಯಲ್ಲಿ ಆಗ್ರಹ
ಹೊಸಪೇಟೆ: ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಎದುರು ಕಾಂಗ್ರೆಸ್ ಪಕ್ಷ ನಡೆಸಿದ ಪ್ರತಿಭಟನೆ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆ ನಿರತ ಶಾಸಕರ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಪಟೇಲ್ ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ನಗರದ ಡಾ. ಪುನೀತ್ ರಾಜಕುಮಾರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರದ ಗೂಂಡಾ ವರ್ತನೆ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪುನೀತ್ ಕುಮಾರ ವೃತ್ತದ ಕಡೆಗೆ ಧಾವಿಸುತ್ತಿದ್ದರು. ಬಿಜೆಪಿ ನಾಯಕರ ಮೇಲಿನ ದೌರ್ಜನ್ಯ ಕಾಂಗ್ರೆಸ್ ಪ್ರಾಯೋಜಿತ ಗೂಂಡಾಗಿರಿ ಎಂದು ಆರೋಪಿಸಿ ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ವಿರುದ್ಧ ದಿಕ್ಕಾರದ ಕೂಗುಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್, ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಸಿಂಗ್ ಹಾಗೂ ಮುಖಂಡರಾದ ಅಶೋಕ ಜೀರೆ, ಓದೋ ಗಂಗಪ್ಪ ಮಾತನಾಡಿ, ದೆಹಲಿಯಲ್ಲಿ ಪ್ರಧಾನಿ ನಿವಾಸದ ಎದುರು ಕಾಂಗ್ರೆಸ್ ನಡೆಸಿದ ಸಂವಿಧಾನಬಾಹಿರ ಪ್ರತಿಭಟನೆ ಮತ್ತು ಬೆಂಗಳೂರಿನಲ್ಲಿ ಬಿಜೆಪಿ ಮುಖಂಡರ ಮೇಲೆ ದಾಳಿ ನಡೆಸಿ ಮೊಟ್ಟೆ ಎಸೆದಿರುವುದು ಕಾಂಗ್ರೆಸ್‌ನ ಸಂಸ್ಕೃತಿಯನ್ನು ತೋರಿಸುತ್ತದೆ. ಸಂವಿಧಾನದ ಹೆಸರೇಳಿಕೊಂಡು ಕಾಂಗ್ರೆಸ್‌ನವರು ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ," ಎಂದು ಬಿಜೆಪಿ ಮುಖಂಡರು ಎಚ್ಚರಿಸಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ, ಪ್ರಮುಖರಾದ ಮಧುರಚನ್ನಶಾಸ್ತ್ರಿ, ಕಾಸಟ್ಟಿ ಉಮಾಪತಿ, ರೇವಣಸಿದ್ದಪ್ಪ, ಶಂಕರ್ ಮೇಟಿ, ಭಾಗ್ಯಮ್ಮ ಇತರರಿದ್ದರು.

ಬಿಗಿ ಪೊಲೀಸ್ ಬಂದೋಬಸ್ತ್

ಪ್ರತಿಭಟನೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಸ್ಪಿ ಎಸ್.ಜಾಹ್ನವಿ ಅವರ ಮಾರ್ಗದರ್ಶನದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಎಎಸ್ಪಿ ಜಿ.ಮಂಜುನಾಥ, ಡಿವೈಎಸ್ಪಿ ಪಿ.ಮುರಳಿಧರ್, ಪಿಐಗಳಾದ ಡಿ.ಹುಲುಗಪ್ಪ, ಫೈಜುಲ್ಲಾ, ಸೋಮ್ಲಾನಾಯ್ಕ್, ಗುರುರಾಜ ಕಟ್ಟಿಮನಿ, ಮಹಮದ್ ಗೌಸ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಬಿಗಿ ಭದ್ರತೆ ಒದಗಿಸಲಾಯಿತು.