ಹೊಸಪೇಟೆ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನಡೆದ ರಾಷ್ಟ್ರ ಧ್ವಜಾರೋಹಣ ವೇಳೆ ನಡೆದ ಪಂಥ ಸಂಚಲನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಪಂ ಸಿಇಒ ನೋಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಶಾ, ಎಸ್ಪಿ ಎಸ್.ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ಇತರರಿದ್ದರು.
- ಗಣರಾಜ್ಯೋತ್ಸವ ರಾಷ್ಟ್ರ ಧ್ವಜಾರೋಹಣ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ
ಹೊಸಪೇಟೆ: ದೇಶದಲ್ಲಿ ಸಂವಿಧಾನ ರಚನೆಯಿಂದಾಗಿ ಸಮಾನತೆ ನಿರ್ಮಾಣ ಸಾಧ್ಯವಾಗಿದೆ. ನಾವೆಲ್ಲ ಸಂವಿಧಾನದ ಆಶಯ ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನದ ಮೂಲಕ ಡಾ; ಬಿ.ಆರ್.ಅಂಬೇಡ್ಕರ್‌ರವರ ಕನಸು ನನಸು ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹೇಳಿದರು.
77ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಂವಿಧಾನದ ಮೂಲ ಆಶಯ ಸಾಮಾಜಿಕ ನ್ಯಾಯವಾಗಿದೆ. ಪ್ರಪಂಚದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ನಮ್ಮ ದೇಶ ಪ್ರಜಾತಂತ್ರ ಗಣತಂತ್ರ ಪ್ರಯೋಗವನ್ನು ಯಶ್ವಸಿಯಾಗಿ ನಡೆಸಿಕೊಂಡು ಬಂದಿದೆ. ಇದಕ್ಕಾಗಿ ಭಾರತದ ಸಂವಿಧಾನ ಶಿಲ್ಪಿ ಮಹಾನ್ ಮಾನವತವಾದಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಿಸಲೇಬೇಕು. ದೇಶದ ಇತಿಹಾಸದಲ್ಲೇ ಜನವರಿ 26 ಅತ್ಯಂತ ಮಹತ್ವದ ದಿನವಾಗಿದ್ದು, ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ದತಿಯನ್ನು ಅಳವಡಿಸಿಕೊಂಡ ಈ ಸಂಭ್ರಮದ ಐತಿಹಾಸಿಕ ದಿನದಂದು ಗಣತಂತ್ರ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದರ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲಾಗಿದೆ ಎಂದರು.
2024ರಲ್ಲಿ ವಿವಿಧ ಯೋಜನೆಗಳಡಿ 36,780 ಮನೆಗಳು. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 42,345 ಮನೆ ಹಂಚಿಕೆ ಮಾಡಲಾಗಿದ್ದು, ಒಟ್ಟು 80 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಕಳೆದ ವರ್ಷ ಈ ಭಾಗದಲ್ಲಿ 2580 ಕೋಟಿ ರೂ. ಅನುದಾನ ನೀಡಲಾಗಿದೆ. ಸಂಡೂರಿನಲ್ಲಿ 1600 ಕೋಟಿ ಮತ್ತು ಕೊಪ್ಪಳದಲ್ಲಿ ರೂ.1310 ಕೋಟಿ ರೂ. ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಬಡವರಿಗೆ, ಮಹಿಳೆಯರಿಗೆ, ಯುವಕರ ಹಿತದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಈಗಾಗಲೇ ಯಶಸ್ವಿಯಾಗಿ ಯೋಜನೆಗಳು ಅನುಷ್ಟಾನವಾಗುತ್ತಿದ್ದು ರಾಜ್ಯ ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡಿ ಎಲ್ಲಾ ಜಿಲ್ಲೆಗಳಿಗೆ ಹೆಚ್ಚಿನ ಅನುದಾನಗಳನ್ನು ನೀಡಲಾಗಿದೆ. 2026 ಅಂತ್ಯದೊಳಗೆ ವಸತಿ ರಹಿತರಿಗೆ ಸೂರು ಕಲ್ಪಿಸಲಾಗುತ್ತದೆ. ಇದು ಸರ್ಕಾರದ ಆರನೇ ಗ್ಯಾರಂಟಿ ಎಂದು ಎಂದರು.
ಪೊಲೀಸ್ ಇಲಾಖೆ, ಗೃಹಕ ರಕ್ಷಕದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ಪೌರಕಾರ್ಮಿಕರ ತುಕಡಿಗಳು ಸೇರಿದಂತೆ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧಕರಿಗೆ ಗೌರವಿಸಲಾಯಿತು. ರಾಜ್ಯ ಯುವ ಸಂಸತ್ ಭವನದಲ್ಲಿ ಚರ್ಚಾ ಸ್ಪಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಚಿರುಗೆ 50 ಸಾವಿರ ರೂ. ನಗದು ಬಹುಮಾನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಹುಡಾ ಅಧ್ಯಕ್ಷ ಇಮಾಮ್ ನಯಾಜಿ, ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಪಂ ಸಿಇಒ ನೋಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಶಾ, ಎಸ್ಪಿ ಎಸ್.ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಉಪವಿಭಾಗಿಯಾಧಿಕಾರಿ ವಿವೇಕಾನಂದ, ಡಿಡಿಪಿಐ ವೆಂಕಟೇಶ ರಾಮಚಂದ್ರ, ತಹಸೀಲ್ದಾರ್ ಶೃತಿ ಎಂ.ಮಳ್ಳಪ್ಪ ಗೌಡ್ರ್ ಇತರರಿದ್ದರು.