ಹೊಸಪೇಟೆ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಉದ್ಘಾಟಿಸಿದರು. ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಎಸ್ಪಿ ಜಾಹ್ನವಿ, ಜಿಪಂ ಸಿಇಒ ನೋಂಗ್ಜಾಯ್ ಮೊಹ್ಮದ್ ಅಲಿ ಅಕ್ರಮ್ ಶಾ ಇತರರಿದ್ದರು.
- ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಅಭಿಪ್ರಾಯ
ಹೊಸಪೇಟೆ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಭಾರತಕಕ್ಕೆ ಮತದಾನದ ಮೂಲಕ ಸದೃಢ ನಿರ್ಮಾಣ ಮಾಡಬೇಕಿದೆ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವಕರು ಮತ್ತು ವಿದ್ಯಾರ್ಥಿಗಳು ರಾಷ್ಟç್ರದ ಭವಿಷ್ಯವಾಗಿದ್ದು, ಸಂವಿಧಾನ ಮತ್ತು ದೇಶದ ಆಡಳಿತ ವ್ಯವಸ್ಥೆಯ ಬಗ್ಗೆ ಅರಿತುಕೊಳ್ಳಬೇಕು. ಚುನಾವಣೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಎಚ್ಚರಿಕೆ ವಹಿಸಿ ಹಣ ಅಥವಾ ಆಮಿಷಗಳಿಗೆ ಒಳಗಾಗಿ ಮತ ಮಾರಿಕೊಳ್ಳುವುದು ಭ್ರಷ್ಟಾಚಾರಕ್ಕೆ ಸಮಾನ. ಇಂತಹ ನಡವಳಿಕೆಯಿಂದ ದೇಶದ ಏಳಿಗೆ ಅಸಾಧ್ಯ. ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ಪ್ರಸ್ತಾವನೆ, ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದಿರಬೇಕು. ಭ್ರಷ್ಟಾಚಾರ ಮುಕ್ತ ರಾಷ್ಟ್ರ ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕಾದರೆ ಕಡ್ಡಾಯ ಮತದಾನ ಅಗತ್ಯ ಎಂದರು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, 2011 ರಿಂದ ಪ್ರತಿವರ್ಷ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಈ ಬಾರಿ ನನ್ನ ಭಾರತ, ನನ್ನ ಮತ ಎಂಬ ಘೋಷವಾಕ್ಯದಡಿ ಅರಿವು ಮೂಡಿಸಲಾಗುತ್ತಿದೆ. 18 ವರ್ಷ ಮೇಲ್ಪಟ್ಟ ಎಲ್ಲಾ ಯುವಜನರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ನೆರೆ ದೇಶಗಳಿಗಿಂತ ಭಾರತದಲ್ಲಿ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯಿದ್ದು, ಇದರ ರಕ್ಷಣೆಗೆ ಯುವ ಸಮೂಹ ಸಕ್ರಿಯವಾಗಿ ಮತದಾನದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಮತ್ತು ಬೂತ್ ಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್‌ಓಗಳಿಗೆ ಗೌರವಿಸಲಾಯಿತು.
ಎಸ್ಪಿ ಜಾಹ್ನವಿ, ಜಿಪಂ ಸಿಇಒ ನೋಂಗ್ಜಾಯ್ ಮೊಹ್ಮದ್ ಅಲಿ ಅಕ್ರಮ್ ಶಾ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ನಗರಸಭೆ ಪೌರಾಯುಕ್ತ ಶಿವಕುಮಾರ್ ಇತರರಿದ್ದರು.