ಹೊಸಪೇಟೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ತಾರೀಹಳ್ಳಿ ಹನುಮಂತಪ್ಪ, ಪ್ರಮುಖರಾದ ಹುಲಗಪ್ಪ, ಮಹಬೂಬ್ ಬಾಷಾ, ವಿ.ಮಂಜುನಾಥ ಇತರರಿದ್ದರು.
- ಡಿಸಿ ಕವಿತಾ ಎಸ್.ಮನ್ನಿಕೇರಿಗೆ ಕರವೇ ಸ್ವಾಭಿಮಾನಿ ಸೇನೆ ಮನವಿ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಘೋಷಿಸಲಾದ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಆದೇಶವನ್ನು ಶೀಘ್ರವೇ ಹೊರಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮೂಲಕ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಸಂಘಟನೆಯ ಜಿಲ್ಲಾಧ್ಯಕ್ಷ ತಾರೀಹಳ್ಳಿ ಹನುಮಂತಪ್ಪ ಮಾತನಾಡಿ, 2025-26ನೇ ಸಾಲಿನ ಬಜೆಟ್‌ನಲ್ಲಿ ವಿಜಯನಗರದ 20, ರಾಯಚೂರಿನ 27, ಕಲಬುರಗಿಯ 19, ಕೊಪ್ಪಳದ 14, ಯಾದಗಿರಿಯ 14, ಬಳ್ಳಾರಿಯ 5 ಹಾಗೂ ಬೀದರ್‌ನ 1 ಸೇರಿ ಒಟ್ಟು 100 ಶಾಲೆಗಳನ್ನು ಉನ್ನತೀಕರಿಸುವುದಾಗಿ ಘೋಷಿಸಲಾಗಿತ್ತು. ಆದರೆ ಸಂಬಂಧಪಟ್ಟ ಅಧಿಕಾರಿಗಳು ಈವರೆಗೂ ಯಾವುದೇ ಅಧಿಕೃತ ಆದೇಶ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಮುಂದಿನ ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿದೆ. ಸರ್ಕಾರ ಹಾಗೂ ಶಿಕ್ಷಣ ಇಲಾಖೆ ತಕ್ಷಣವೇ ಶಾಲೆಗಳ ಉನ್ನತೀಕರಣಕ್ಕೆ ಕ್ರಮಕೈಗೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಾದ್ಯಂತ ಉಗ್ರ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದರು.