ಕೂಡ್ಲಿಗಿಯಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಫಲಿತಾಂಶ ಸುಧಾರಣೆ ಹಾಗೂ ಶಾಲೆಗಳಲ್ಲಿ ಮೂಲಸೌಕರ್ಯಗಳ ಪ್ರಗತಿ ಪರಿಶೀಲನೆ ಹಾಗೂ ಜೆಸ್ಕಾಂ ಅಧಿಕಾರಿಗಳ ಸಭೆ ನಡೆಯಿತು. 
ವಿಜಯನಗರ

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಅಶೋಕ್ ಕುಮಾರ್ ಎನ್
ಕೂಡ್ಲಿಗಿ: ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಬೋಧನೆ ಮಾಡುವ ಮೂಲಕ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸಬೇಕು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ, ಶಾಲೆಗಳಲ್ಲಿ ಮೂಲ ಸೌಕರ್ಯ ಪ್ರಗತಿ ಪರಿಶೀಲನೆ ಹಾಗೂ ಜೆಸ್ಕಾಂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಪಬ್ಲಿಕ್ ಶಾಲೆಗಳು ಇರುವ ಕಡೆ ಹಾಸ್ಟೆಲ್ ನಿರ್ಮಾಣಕ್ಕೆ ಸರ್ಕಾರಿ ಜಾಗ ಗುರುತಿಸಬೇಕಾಗಿದೆ. ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳ ಜಾಗಗಳ ಬಗ್ಗೆ ಗ್ರಾಮ ಪಂಚಾಯಿತಿಯಲ್ಲಿ 9/11 ಫಾರಂ ಇರುವಂತೆ ನೋಡಿಕೊಳ್ಳಬೇಕು. 1ರಿಂದ 6 ಹಾಗೂ 7ರಿಂದ 12ನೇ ತರಗತಿವರೆಗೆ ಉತ್ತಮ ಕ್ಯಾಂಪಸ್ ನಿರ್ಮಾಣ ಮಾಡಲಾಗುವುದು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಿ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಬೆಳೆಯುವಂತೆ ಮಾಡಲು ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕ್ಷೇತ್ರದಲ್ಲಿರುವ ಹಳೆಯ ವಿದ್ಯುತ್ ಕಂಬಗಳು ಹಾಗೂ ತಂತಿಗಳನ್ನು ಬದಲಾಯಿಸಲು ವಿಶೇಷ ಅನುದಾನ ತರಲಾಗಿದೆ. ಶಾಲೆಗಳ ಆವರಣದಲ್ಲಿರುವ ಎಲ್ಲ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ಸ್ಥಳಾಂತರ ಮಾಡಲು ಆದ್ಯತೆ ನೀಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಇಒ ಮೈಲೇಶ್ ಬೇವೂರು ಮಾತನಾಡಿ, ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ತಾಲೂಕಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಶೇ.100 ಪ್ರಗತಿ ಸಾಧಿಸಲು ಮುಂದಾಗಬೇಕು ಎಂದು ಮುಖ್ಯಶಿಕ್ಷಕರಿಗೆ ಹೇಳಿದರು.
ತಹಸೀಲ್ದಾರ್ ವಿ.ಕೆ.ನೇತ್ರಾವತಿ ಮಾತನಾಡಿ, ಸ್ಲಂ ಬೋರ್ಡಿನಿಂದ ನಿರ್ಮಾಣವಾಗುತ್ತಿರುವ ಮನೆಗಳ ಹಂಚಿಕೆಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಎಲ್ಲ ಫಲಾನುಭವಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ಸರ್ಕಾರಕ್ಕೆ ಕಟ್ಟಬೇಕಾದ ಮೊತ್ತವನ್ನು ಫಲಾನುಭವಿಗಳಿಂದ ಕಟ್ಟಿಸಿಕೊಳ್ಳಲಾಗುವುದು. ಯಾರೂ ಅಮಿಷಕ್ಕೆ ಒಳಗಾಗಿ ಮಧ್ಯವರ್ತಿಗಳಿಗೆ ಹಣ ನೀಡಬಾರದು ಎಂದು ತಿಳಿಸಿದರು.
ತಾಪಂ ಇಒ ನರಸಪ್ಪ, ಜೆಸ್ಕಾಂ ಇಇ ಸತೀಶ್, ತಾಲೂಕಿನ ಪ್ರೌಢಶಾಲೆಗಳ ಮುಖ್ಯಶಿಕ್ಷಕರು, ಜೆಸ್ಕಾಂ ಶಾಖಾಧಿಕಾರಿಗಳು ಭಾಗಿಯಾಗಿದ್ದರು.