ವಿಜಯಪುರ: ಮಹಿಳೆ ತಾಯಿಯಾಗಿ, ಮಡದಿಯಾಗಿ, ಸಹೋದರಿಯಾಗಿ, ಮಗಳಾಗಿ ಹೀಗೆ ಗಂಡಿನ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತಾಳೆ. ಮಹಿಳೆಯನ್ನು ನಾವು ಗೌರವಿಸಬೇಕು. ಆದರೆ ಪೂಜ್ಯನೀಯ ಹೆಣ್ಣಿನ ಮೇಲೆ ವಿವಿಧ ದೌರ್ಜನ್ಯಗಳು ನಡೆಯುತ್ತಿರುವುದು ಶೋಚನೀಯ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಸಾಮುದಾಯಿಕವಾಗಿ ಶ್ರಮಿಸಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ ಹೇಳಿದರು.
ಜಿಪಂ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯಪುರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾಯ್ದೆ-2012, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಆರ್‌ಟಿಇ ಕಾಯ್ದೆ-2009, ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಕುರಿತ ಕಾರ್ಯಾಗಾರ ಹಾಗೂ ರಾಷ್ಟ್ರೀಯ ಐಕ್ಯತೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹತ್ತಾರು ಕಠಿಣ ಕಾನೂನುಗಳನ್ನು ಸರ್ಕಾರ ರೂಪಿಸಿದೆಯಾದರೂ ದೌರ್ಜನ್ಯಗಳು ನಿಂತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಉದ್ಘಾಟನೆ ನೆರವೇರಿಸಿದ ಸಮಗ್ರ ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೆಕರ ಮಾತನಾಡಿ, ಮಕ್ಕಳ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಅವಿರತವಾಗಿ ಶ್ರಮಿಸುತ್ತಿದ್ದು, ಸಂವಿಧಾನಬದ್ಧ ಮಕ್ಕಳ ರಕ್ಷಣೆ, ಅಭಿವೃದ್ಧಿ ಹಾಗೂ ಭಾಗವಹಿಸುವ ಹಕ್ಕುಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರ ಪಾತ್ರವೂ ಪ್ರಮುಖವಾಗಿದೆ ಎಂದು ಹೇಳಿದರು. ಬಸವರಾಜ ಕುಬಕಡ್ಡಿ, ಡಿವೈಎಸ್ಪಿ ಟಿ.ಎಸ್. ಸುಲ್ಪಿ, ಕೆ.ಕೆ. ಚವ್ಹಾಣ್, ಮಹಾದೇವಪ್ಪ ದೇವೂರ ಮತ್ತಿತರರಿದ್ದರು.