ವಿಜಯಪುರ: ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಜಿಲ್ಲಾಧ್ಯಕ್ಷ ರಾಜು ಆಲಗೂರ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶನಿವಾರ ನಡೆದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಹಾಗೂ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಬರುವ ದಿನಗಳಲ್ಲಿ ಕಾರ್ಯಕರ್ತರು ಇನ್ನಷ್ಟು ಕಾರ್ಯಪ್ರವೃತರಾಗಿ ಪಕ್ಷದ ಸಂಘಟನೆ ಬಲಪಡಿಸಿ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ತಮ್ಮ ಮೇಲಿದೆ ಎಂದರು.
ಪಕ್ಷ ಬಲಪಡಿಸುವಲ್ಲಿ ಕಾರ್ಯಕರ್ತರ ಪಾತ್ರ ಬಹುಮುಖ್ಯವಾದದ್ದು, ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷದ ಸಂಘಟನೆಗಾಗಿ ಸಲ್ಲಿಸಿದ ಸೇವೆ ಹಾಗೂ ನಿಷ್ಠೆಯನ್ನು ಪರಿಗಣಿಸಿ ಉತ್ತಮ ಜವಾಬ್ದಾರಿಯನ್ನು ವಹಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಮಾಜಿ ಶಾಸಕ ವಿಠ್ಠಲ ಕಟಕಧೋಂಡ ಮಾತನಾಡಿ, ಮುಂಬರುವ ಮಹಾನಗರ ಪಾಲಿಕೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯಶಾಲಿಯಾಗಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಶತಸಿದ್ಧ. ಅದರಲ್ಲಿ ಕಾರ್ಯಕರ್ತರ ಜವಾಬ್ದಾರಿ ಮಹತ್ತರವಾಗಿದೆ. ಬೂತ್‌ಮಟ್ಟದಿಂದ ಪ್ರತಿಯೊಂದು ಸಮಾಜದ ಪ್ರತಿನಿಧಿಗಳನ್ನು ಒಟ್ಟುಗೂಡಿಸಿ ಪಕ್ಷ ಕಟ್ಟುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಮುಖಂಡ ಅಬ್ದುಲ್‌ಹಮೀದ್ ಮುಶ್ರೀಫ ಮಾತನಾಡಿ, ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಜೀವಾಳವಾಗಿದ್ದು. ತಾವೆಲ್ಲ ಒಟ್ಟಾಗಿ ಸಮಸ್ತ ಸಮಾಜದ ಬಂಧುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಸಂಘಟಿಸಬೇಕು. ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಧಿಕಾರ ಚುಕ್ಕಾಣಿ ಹಿಡಿಯಬೇಕಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಕೀರ ಸನದಿ, ಕಾರ್ಯದರ್ಶಿ ಕಾಂತಾ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಬ್ಬೀರ ಜಾಗೀರದಾರ, ಜಿಲ್ಲಾ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಜಿಲ್ಲಾ ಸೇವಾ ದಳ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಮುಖಂಡರಾದ ಆರತಿ ಶಹಾಪುರ, ಸಜ್ಜಾದೆಪೀರಾ ಮುಶ್ರೀಫ, ಮಹಮ್ಮದ್‌ರಫೀಕ ಟಪಾಲ, ಹಾಸಿಂಪೀರ ವಾಲಿಕಾರ, ಪೀರಪ್ಪ ನಡುವಿನಮನಿ, ಕೆ.ಎ್.ಅಂಕಲಗಿ, ಅಡಿವೆಪ್ಪ ಸಾಲಗಲ್, ಆಜಾದ ಪಟೇಲ, ಬಡೆಪೀರ ಜುನೆದಿ, ವಸಂತ ಹೊನಮೊಡೆ ಇನ್ನಿತರರು ಪಾಲ್ಗೊಂಡಿದ್ದರು.