ವಿಜಯಪುರ: ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ನಗರಾಭಿವೃದ್ಧಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗೆ ಮಾತ್ರ ಮತ್ತು 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಕೋವಿಡ್ -19 ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.
ಸದ್ಯಕ್ಕೆ ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕೆ ಮಾತ್ರ ನೀಡಲಾಗುತ್ತಿದೆ. ಈಗಾಗಲೇ 2,70,953 ಡೋಸ್ ಲಸಿಕೆಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಕೋವಿಶಿಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದ್ದು, ಕೋವಿಶಿಲ್ಡ್ ಲಸಿಕೆ ಪಡೆದವರು 2ನೇ ಡೋಸ್‌ನ್ನು ಮೊದಲ ಡೋಸ್ ಪಡೆದ 42 ದಿನಗಳ ನಂತರ ಪಡೆಯಬೇಕು. ಅದೇ ರೀತಿ ಕೋವ್ಯಾಕ್ಸಿನ್ ಲಸಿಕೆ ಪಡೆದವರು 2ನೇ ಡೋಸ್‌ನ್ನು 28 ದಿನಗಳ ನಂತರ ಪಡೆಯಬೇಕು ಎಂದು ಮಾಹಿತಿ ನೀಡಿದ್ದಾರೆ.
ಸದ್ಯಕ್ಕೆ ಜಿಲ್ಲೆಯಲ್ಲಿ 2ನೇ ಡೋಸ್ ಲಸಿಕೆಯನ್ನು ಮಾತ್ರ ನೀಡಲಾಗುತ್ತಿದೆ. ಮೊದಲ ಡೋಸ್ ಲಸಿಕೆ ಪಡೆಯುವ ಅರ್ಹ ಫಲಾನುಭವಿಗಳಿಗೆ ನಂತರದ ದಿನಗಳಲ್ಲಿ ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆಯನ್ನು ನೀಡಲಾಗುವುದು. ಮೊದಲನೆಯ ಡೋಸ್ ಲಸಿಕೆಯನ್ನು ನೀಡುವ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಹೆಚ್ಚಿದ ಮಹಾಮಾರಿ ಅಬ್ಬರ
ಜಿಲ್ಲೆಯಲ್ಲಿ ಕರೊನಾ ಮಹಾಮಾರಿ ಅಬ್ಬರ ದಿನೇ ದಿನೆ ಹೆಚ್ಚಾಗುತ್ತಿದೆ. ಶನಿವಾರ 539 ಜನರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 272ಕ್ಕೆ ಏರಿಕೆ ಆಗಿದೆ.
39 ವರ್ಷದ ಮಹಿಳೆ, 38 ವರ್ಷದ ಪುರುಷ, 70 ವರ್ಷದ ವೃದ್ಧ ಮೃತಪಟ್ಟಿದ್ದಾರೆ. 291 ಜನರು ವಿವಿಧ ಆಸ್ಪತ್ರೆಗಳಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 3,684 ಸಕ್ರಿಯ ಪ್ರಕರಣಗಳಿದ್ದು, 1,590 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.