ವಿಜಯಪುರ: ಜೆಎನ್‌ಯು ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ‘ಏಳಿ ಎದ್ದೇಳಿ ಗುರಿ ಮುಟ್ಟುವವರೆಗೂ ನಿಲ್ಲದಿರಿ’ ಎಂಬ ಸಂದೇಶವನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದು ದುರದೃಷ್ಟಕರ ಸಂಗತಿ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಭಾನುವಾರ ಇಲ್ಲಿನ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಯುವ ಸಮೂಹ ಸ್ವಾಮಿ ವಿವೇಕಾನಂದರ ಚಿಂತನೆ ಮತ್ತು ಸ್ವಾಭಿಮಾನ ರೂಢಿಸಿಕೊಳ್ಳಬೇಕು. ಬದಲಾಗಿ ಅವರ ಸಂದೇಶಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದೆಂದರು.
ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪಾಟೀಲ, ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗೆ ಪರಮಾಧಿಕಾರವಿದೆ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರಿಗೆ ಬಿಡಬೇಕು ಮತ್ತು ಯಾವಾಗ ರಚನೆ ಮಾಡಬೇಕೆಂದು ಅವರೇ ತೀರ್ಮಾನ ಕೈಗೊಳ್ಳುತ್ತಾರೆ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಪಂಚಮಸಾಲಿ ಸಮಾಜಕ್ಕೆ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರುವ ಬಗ್ಗೆ ನಾನೇನನ್ನೂ ಹೇಳಲ್ಲ. ಎಲ್ಲರಿಗೂ ಸಚಿವರಾಗಬೇಕೆಂಬ ಆಸೆ ಇರುತ್ತದೆ. ಆದರೆ ಸಚಿವರನ್ನಾಗಿ ಮಾಡೋದು ಬಿಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಜ.16 ಕ್ಕೆ ಸಿಎಂ ಯಡಿಯೂರಪ್ಪ ವಿಜಯಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಜ.18 ರಂದು ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪಕ್ಷದ ಉನ್ನತ ತೀರ್ಮಾನಗಳನ್ನು ವರಿಷ್ಠರು ತೆಗೆದುಕೊಳ್ಳುತ್ತಾರೆ ಎಂದ ಸಚಿವ ಸಿ.ಸಿ. ಪಾಟೀಲ ಅವರು, ಎಲ್ಲ ತೀರ್ಮಾನ ವರಿಷ್ಠರೇ ತೆಗೆದುಕೊಳ್ಳುತ್ತಿರುವುದೇನೋ ಸರಿ. ಆದರೆ ಸಂಪುಟದ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲವೇ? ಅಭಿಪ್ರಾಯ ಪಡೆಯುತ್ತಿಲ್ಲವೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ‘ಅಸಮಂಜಸ ಪ್ರಶ್ನೆಗೆ ಪ್ರತಿಕ್ರಿಯಿಸಲ್ಲ’ ಎಂದರು.