ವಿಜಯಪುರ: ಸಿಂದಗಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಕ್ಷೇತ್ರ ವ್ಯಾಪ್ತಿಯಲ್ಲಿ ಅ. 27ರ ಸಂಜೆ 7ರಿಂದ 30ರವರೆಗೆ ಸಿಆರ್‌ಪಿಸಿ ಕಾಯ್ದೆ 1974 ರ ಕಲಂ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಕ್ಷೇತ್ರದ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣೆ ಅಭ್ಯರ್ಥಿ, ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರಬಾರದು. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣಿ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಝರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಮತದಾನ ದಿನದಂದು ಮತಗಟ್ಟೆಗಳ 100 ಮೀಟರ್ ವ್ಯಾಪ್ತಿಯಲ್ಲಿ ಚುನಾವಣೆ ಪ್ರಚಾರ ನಿಷೇಧಿಸಿದೆ. ಕಲ್ಲು, ಕ್ಷಾರ ಪಧಾರ್ಥ ಇಲ್ಲವೆ ಸ್ಫೋಟಕ ವಸ್ತುಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ, ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು. ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕರೊನಾ ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರ ಧಾರ್ಮಿಕ ಮೆರವಣಿಗೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕರೊನಾ ಮಾರ್ಗಸೂಚಿಗಳನ್ನು, ನಿಯಮಗಳನ್ನು ಪಾಲಿಸಬೇಕು.
ಮತದಾನ ದಿನದಂದು ಮತಗಟ್ಟೆಗಳ 100 ಮೀಟರ್ ವ್ಯಾಪ್ತಿಯಲ್ಲಿ (ಚುನಾವಣಾ ಕಾರ್ಯದಲ್ಲಿ ಚುನಾವಣಾಧಿಕಾರಿ, ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು, ಸಿಬ್ಬಂದಿ ಹೊರತುಪಡಿಸಿ) ಮೊಬೈಲ್ ಫೋನ್, ಕಾರ್ಡ್‌ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮತದಾನ ದಿನದಂದು ಮತ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಕರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಬಹಿರಂಗ ಪ್ರಚಾರ ಅ. 27 ರ ಸಂಜೆ 7ಕ್ಕೆ ಕೊನೆಗೊಳ್ಳುತ್ತಿದ್ದು, ಈ ಅವಧಿಯ ನಂತರ ಸಿಂದಗಿ ವಿಧಾನಸಭೆ ಮತಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗಬೇಕು. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್ ಮತ್ತು ಅತಿಥಿಗೃಹಗಳನ್ನು ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡಬೇಕು.
ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು. ಈ ಆದೇಶ ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣೆ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.