ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತ ಸಭೆಯಲ್ಲಿ ಅಧಿಕಾರಿಗಳು ವರದಿಯೊಪ್ಪಿಸಿದರು.
- ಡಿಸಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ
- ಮತಗಟ್ಟೆ ಅಧಿಕಾರಿಗಳಿಗೆ ಮಾರ್ಗದರ್ಶನ
- ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ತಿಳಿವಳಿಕೆ
ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇದೇ ಜೂ. 20ರಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಳು ಪ್ರಾರಂಭವಾಗಲಿದ್ದು, ಜಿಲ್ಲೆಯ ಎಲ್ಲ 2092 ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿಗಳು ಮತ್ತು ಪ್ರತಿ 10 ಮತಗಟ್ಟೆಗೆ ಒಬ್ಬರಂತೆ ಮತಗಟ್ಟೆ ಅಧಿಕಾರಿಗಳ ಮೇಲ್ವಿಚಾರಕರು ಇರುವಂತೆ ನೋಡಿಕೊಂಡು ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳವರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಯೋವೃದ್ಧರು ಅನಾರೋಗ್ಯದಿಂದ ಬಳಲುತ್ತಿರುವವರು, ಅಂಗವಿಕಲರು, ಬಡವರು ಹಾಗೂ ದುರ್ಬಲರಿಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸುಲಭವಾಗುವಂತೆ ಸ್ವಯಂ ಸೇವಕರನ್ನು ನಿಯೋಜಿಸಿಕೊಳ್ಳಬೇಕು ಎಂದರು.
ತಾಲೂಕು ಮಟ್ಟದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಜರುಗಿಸಿ, ಅವರಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ತಿಳಿವಳಿಕೆ ನೀಡಿ, ಜಿಲ್ಲಾಧಿಕಾರಿ ಕಚೇರಿಗೆ ವರದಿ ಸಲ್ಲಿಸಬೇಕು. ಎಸ್‌ಐಆರ್ ಕಾರ್ಯದಲ್ಲಿ ನಿರ್ಲಕ್ಷೃ ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ-1950 ರಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
2002 ರ ಮತದಾರರ ಪಟ್ಟಿಯನ್ನು 2025 ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡಲು ಇನ್ನೂ ಅವಕಾಶವಿದ್ದು, ಬಾಕಿ ಮತದಾರರ ಮ್ಯಾಪಿಂಗ್ ಕಾರ್ಯವನ್ನು ಕೈಗೊಳ್ಳಬೇಕು. ಎಲ್ಲ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳಿಗೆ ಇನ್ನೊಂದು ಬಾರಿ ತರಬೇತಿ ನೀಡಬೇಕು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಮತಗಟ್ಟೆ ಏಜೆಂಟುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜಿಲ್ಲೆಯ ಎಲ್ಲ ವಿಧಾನಸಭಾ ಮತಕ್ಷೇತ್ರದ ಎಲ್ಲ ಮತಗಟ್ಟೆಗಳಿಗೆ ನೇಮಕಾತಿ ಕುರಿತು ಕ್ರಮ ವಹಿಸಬೇಕು ಎಂದರು.
ಗಣತಿ ಫಾರ್ಮ್‌ಗಳನ್ನು ಮತಗಟ್ಟೆ ಅಧಿಕಾರಿಗಳು, ಕಡ್ಡಾಯವಾಗಿ ಮತದಾರರಿಗೆ ಅಥವಾ ಸಂಬಂಧಿಕರಿಗೆ ಮಾತ್ರ ನೀಡಲು ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನಾಗಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಆಯಾ ತಾಲೂಕುಗಳ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ತೆಗೆದುಕೊಂಡ ಕ್ರಮಗಳ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಿಗೆ ತಿಳುವಳಿಕೆ ನೀಡಬೇಕು ಎಂದು ಡಾ. ಔದ್ರಾಮ್ ತಿಳಿಸಿದರು.
ಬಿಎಲ್ ಒ ಫೆಸಿಲಿಟೇಶನ್ ಸೆಂಟರ್ ಗಳನ್ನು ತಾಂತ್ರಿಕ ಸಹಾಯ ಬಯಸುವ ಬಿಎಲ್‌ಒಗಳಿಗೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಲು ತಾಂತ್ರಿಕ ನೆರವನ್ನು ಒದಗಿಸುವ ಕುರಿತು, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಗ್ರಾಮ ಆಡಳಿತಾಧಿಕಾರಿ ಕಚೇರಿ, ಪಂಚಾಯತ್ ಕಟ್ಟಡಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ಅನುದಾನ ಪಡೆದು ನಿರ್ಮಿಸಿರುವ ಸಮುದಾಯ ಭವನಗಳು, ನಗರ ಪ್ರದೇಶಗಳಲ್ಲಿ ವಾರ್ಡ್ ಕಚೇರಿಗಳು, ಮುಖ್ಯ ಪೌರಾಯುಕ್ತರ ಕಚೇರಿಗಳು, ತಾಲೂಕು ಕೇಂದ್ರದಲ್ಲಿ ತಾಲೂಕು ಕಚೇರಿ (ತಹಸೀಲ್ದಾರ್‌ರ ಕಚೇರಿ), ಗ್ರಾಮ ಒನ್, ನಾಡ ಕಚೇರಿಗಳಲ್ಲಿ ಬಿಎಲ್‌ಒ ಸೆಂಟರ್‌ಗಳನ್ನು ಸ್ಥಾಪಿಸಿಕೊಳ್ಳಲು ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳವರಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ವೋಟರ್ ಫೆಸಿಲಿಟೇಶನ್ ಸೆಂಟರ್ ಗಳನ್ನು ಮತದಾರರಿಗೆ ಸುಲಭವಾಗಿ ಹಾಗೂ ಸಾಧ್ಯವಾಗಿರುವಂತಹ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಸ್ಥಾಪಿಸಿ, ಮತದಾರರಿಗೆ ಸಹಾಯವಾಗುವಂತೆ ವ್ಯವಸ್ಥೆ ಮಾಡುವುದು ಬಿಎಲಒಗಳಿಗೆ ವಹಿಸಿಕೊಟ್ಟು, ಮೇಲುಸ್ತುವಾರಿ ನೋಡಿಕೊಳ್ಳಲು ಸೂಚಿಸಿದರು.
ಜಿಲ್ಲೆಯ ನೋಂದಣಾಧಿಕಾರಿ ವಿಜಯ ಮೆಕ್ಕಳಕಿ, ರಾಜಶೇಖರ ಡಂಬಳ, ವಿನಯ ಪಾಟೀಲ, ಗುರುನಾಥ ದಡ್ಡೆ, ಚಿದಾನಂದ ಗುರುಸ್ವಾಮಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಸೇರಿ ಜಿಲ್ಲೆಯ ಎಲ್ಲ ತಹಸೀಲ್ದಾರ್‌ರು ಮತ್ತು ಮತಕ್ಷೇತ್ರದ ತರಬೇತುದಾರರು ಇದ್ದರು.