ಸಿಂದಗಿಯಲ್ಲಿ ಸಿಇಒ ರಿಷಿ ಆನಂದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಇಒ ರಾಮು ಜಿ. ಅಗ್ನಿ ಹಾಗೂ ಅಭಿಯಂತರ ತಾರಾನಾಥ ರಾಠೋಡ ಇದ್ದಾರೆ.
- ತಾಲೂಕು ಮಟ್ಟದಲ್ಲಿ ಪ್ರಗತಿ ಪರಿಶೀಲನೆ
- ಸಿಂದಗಿ-ಆಲಮೇಲದಲ್ಲಿ ಸಭೆ ಆಯೋಜನೆ
- ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ
ವಿಜಯಪುರ: ಗ್ರಾಮೀಣ ಜನರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಿಂದಗಿ ತಾಪಂ ಸಭಾಂಗಣದಲ್ಲಿ ಸೋಮವಾರ ಸಿಂದಗಿ ಮತ್ತು ಆಲಮೇಲ ತಾಲೂಕುಗಳ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಕುಡಿಯುವ ನೀರಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಿಂದಗಿ ಹಾಗೂ ಆಲಮೇಲ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ
ಕುಡಿಯುವ ನೀರಿನ ಮೂಲಗಳು, ನೀರಿನ ಲಭ್ಯತೆ ಹಾಗೂ ಪ್ರಸ್ತುತ ಸ್ಥಿತಿ-ಗತಿ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ನೀರು ಪ್ರತಿಯೊಂದು ಜೀವಿಗೂ ಅವಶ್ಯಕತೆಯಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಕ್ರಮ ವಹಿಸಬೇಕು ಎಂದರು.
ಗುಣಮಟ್ಟ ಪರಿಶೀಲಿಸಿ
ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಿನ ಮೂಲಗಳ ಎಫ್‌ಟಿಕೆ ಪರೀಕ್ಷೆಯನ್ನು ಬಾಕಿ ಉಳಿದಿರುವ ಕಡೆಗಳಲ್ಲಿ ಎರಡು ದಿನಗಳೊಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಗ್ರಾಮಗಳಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಕಲುಷಿತ ನೀರು ಪೂರೈಕೆಯಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪುನರುಚ್ಚರಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು, ಪ್ರತಿದಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಬೇಕು. ಸಮಸ್ಯೆಗಳಿದ್ದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತಂದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.
ಜೆಜೆಎಂ ಪರಿಶೀಲನೆ
ಜಲ ಜೀವನ ಮಿಷನ್ ಯೋಜನೆಯಡಿ ಅನುಷ್ಟಾನಗೊಳ್ಳುತ್ತಿರುವ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲಿಸಿದ ಸಿಇಒ, ಕಾಮಗಾರಿಗಳು ಪೂರ್ಣಗೊಂಡ ನಂತರ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗುತ್ತಿದ್ದು, ನಂತರದ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿ ಗ್ರಾಮ ಪಂಚಾಯಿತಿಗಳದ್ದಾಗಿರುತ್ತದೆ. ಆದ್ದರಿಂದ ಕಾಮಗಾರಿ ಅನುಷ್ಟಾನದ ಹಂತದಲ್ಲಿಯೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗುಣಮಟ್ಟದ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸಿದರು.
ಜಲ ಜೀವನ ಮಿಷನ್‌ಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಧಾರ್ ಕಾರ್ಡ್ ಅಪ್ಲೋಡ್ ಪ್ರಕ್ರಿಯೆ ಬಾಕಿ ಉಳಿದಿದ್ದು, ಅದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಮುಂದಿನ 10 ದಿನಗಳೊಳಗಾಗಿ ಹರ್ ಘರ್ ಜಲ್ ಡಿಕ್ಲೇರೇಷನ್ ಅಭಿಯಾನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನರೇಗಾ ಪ್ರಗತಿ ಪರಿಶೀಲನೆ
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 100 ಕೂಲಿಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ನಿಗದಿತ ಗುರಿಗೆ ಅನುಗುಣವಾಗಿ ಮಾನವ ದಿನಗಳ ಸೃಜನೆ ಮಾಡುವುದು, ನೋಂದಾಯಿತ ಎಲ್ಲಾ ಕೂಲಿಕಾರ್ಮಿಕರಿಗೆ ಇ-ಕೆವೈಸಿ ಶೇ.ನೂರರಷ್ಟು ಪೂರ್ಣಗೊಳಿಸುವುದು, ಕಾಮಗಾರಿಗಳಿಗೆ ಸಂಬಂಧಿಸಿದ ಸಾಮಗ್ರಿ ಮೊತ್ತದ ಪಾವತಿ, ಸಮಯಕ್ಕೆ ಸರಿಯಾಗಿ ಕೂಲಿ ಪಾವತಿ, ಕಾಮಗಾರಿಗಳ ಪೂರ್ಣಗೊಳಿಸುವಿಕೆ ಹಾಗೂ ಜಿಯೋ ಟ್ಯಾಗ್ ಪ್ರಗತಿ ಸಾಧಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ವಿವಿಧ ವಸತಿ ಯೋಜನೆಗಳಡಿ ಕಾರ್ಯಾದೇಶ ಪಡೆದ ಫಲಾನುಭವಿಗಳು ತಕ್ಷಣ ಮನೆ ನಿರ್ಮಾಣ ಕಾರ್ಯ ಪ್ರಾರಂಭಿಸುವಂತೆ ಮನವರಿಕೆ ಮಾಡಬೇಕು. ಎಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇ-ಹಾಜರಾತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತೆರಿಗೆ ವಸೂಲಾತಿ ಅಭಿಯಾನವನ್ನು ತ್ವರಿತವಾಗಿ ಹಮ್ಮಿಕೊಂಡು ಹೆಚ್ಚಿನ ಪ್ರಗತಿ ಸಾಧಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಒ ರಾಮು ಜಿ. ಅಗ್ನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ತಾರಾನಾಥ ರಾಠೋಡ, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕಿ ಶೋಭಾ ಮುದಗಲ್, ಇಲಾಖೆಯ ಕಿರಿಯ ಅಭಿಯಂತರ ಎಚ್.ಎಂ. ಸಾರವಾಡ, ಎ.ಎ. ದುರ್ಗದ ಇತರರಿದ್ದರು.