ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ‘ಬಾಲ್ಯ ವಿವಾಹ-ಫೊಕ್ಸೋ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರಕ್ಕೆ’ ಧಾರವಾಡದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಪಂ ಸಿಇಒ ರಿಷಿ ಆನಂದ, ಎಸ್‌ಪಿ ಲಕ್ಷ್ಮಣ ನಿಂಬರಗಿ ಮತ್ತಿತರರಿದ್ದಾರೆ.
- ಮಕ್ಕಳ ಹಕ್ಕುಗಳ ಸಂರಕ್ಷಣಾ ಕಾಯ್ದೆ ಕಾರ್ಯಾಗಾರ
- ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಕೈಜೋಡಿಸಿ
- ಮಕ್ಕಳ ಕ್ಷೇತ್ರಗಳ ಕಾಯ್ದೆಗಳ ಬಗ್ಗೆ ಅರಿವು ಅಗತ್ಯ
ವಿಜಯಪುರ: ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಧಾರವಾಡದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಬಾಲ್ಯ ವಿವಾಹ-ಫೊಕ್ಸೋ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರಕ್ಕೆ’ ಚಾಲನೆ ನೀಡಿ ಅವರು ಮಾತನಾಡಿದರು.
ಎಲ್ಲ ಮಕ್ಕಳನ್ನು ಶಾಲಾ ದಾಖಲಾತಿ ಮಾಡಿಸುವ ಮೂಲಕ ಶಾಲೆಯಿಂದ ಯಾವುದೇ ಮಗು ಹೊರಗುಳಿಯದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಿ, ಶಾಲೆಬಿಟ್ಟ ಮಕ್ಕಳ ಮಾಹಿತಿ ಕ್ರೋಢಿಕರಿಸಬೇಕು. ಈ ಬಗ್ಗೆ ಪಾಲಕರಿಗೆ ತಿಳಿವಳಿಕೆ ನೀಡಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಸುಂದರಗೊಳಿಸಿಕೊಂಡು ಸಮಾಜಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ಮಕ್ಕಳ ಕ್ಷೇತ್ರಗಳ ಕಾಯ್ದೆಗಳ ಬಗ್ಗೆ ಅರಿವು ಮತ್ತು ಜಾಗೃತಿ ಅಗತ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳ್ಳುವಂತೆ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಲಿಂಗಾನುಪಾತದ ಬಗ್ಗೆ ಜಾಗೃತಿ ಮೂಡಿಸಬೇಕು. ಗಂಡು-ಹೆಣ್ಣು ಎಂಬ ಲಿಂಗ ತಾರತಮ್ಯ ತೊಡೆದು ಹಾಕಲು ಶ್ರಮಿಸಿ, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ಯೆ ಸೇರಿದಂತೆ ವಿವಿಧ ಅನಿಷ್ಠ ಪದ್ಧತಿ ಹೋಗಲಾಡಿಸಲು, ಜನರಲ್ಲಿ ಸೂಕ್ತ ಜಾಗೃತಿ ಮೂಡಿಸಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಯಮಿತವಾಗಿ ಕಾವಲು ಸಮಿತಿ ನಡೆಸಿ, ಸ್ಥಳೀಯವಾಗಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ ಗ್ರಾಮ ಹಂತದಲ್ಲಿ ಸಭೆ ನಡೆಸುವುದು ಅತ್ಯಂತ ಮಹತ್ವದಾಗಿದೆ. ಈ ಸಭೆಗಳಲ್ಲಿ ಗ್ರಾಮಸ್ಥರು ಪಾಲ್ಗೊಳ್ಳುವಿಕೆಯಿಂದ ಕಾನೂನು ಅರಿವು ಹೊಂದಿ ಇಂತಹ ಪ್ರಕರಣ ಇಳಿಮುಖವಾಗಲು ಸಾಧ್ಯವಾಗುತ್ತದೆ. ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ 1098 ದೂರು ಕರೆ ಮಾಡಿ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.
ಮಾನಸಿಕ ಖಿನ್ನತೆಗೆ ಸಮಬಂಧಿಸಿದ ಪರಿಹಾರ ದೊರಕಿಸಿಕೊಡುವ ಟೆಲಿ ಮನಸ್ ಉಚಿತ ಸಹಾವಾಣಿ ಸಂಖ್ಯೆ 14416 ಸಂಪರ್ಕಿಸಿ ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಮಾತನಾಡಿ, ಮಕ್ಕಳಿಗೆ ಪಠ್ಯ ಬೋಧನೆ ಜೊತೆಗೆ ಮಕ್ಕಳಲ್ಲಿ ಸಂಸ್ಕೃತಿ, ಮಕ್ಕಳ ರಕ್ಷಣೆಗಾಗಿ ಇರುವ ಹಕ್ಕುಗಳ ಬಗ್ಗೆ ತಿಳಿಸಿಕೊಡಬೇಕು. ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯಲ್ಲಿ ಕಾನೂನು ಅರಿವು ಮೂಡಿಸುವ ಮೂಲಕ ಕಾಯ್ದೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಬೇಕು. ಮಕ್ಕಳ ಹಿತದೃಷ್ಟಿಯಿಂದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಕಾರ್ಯಾಗಾರದಲ್ಲಿನ ಮಾಹಿತಿಯನ್ನು ಮನೆ-ಮನೆಗೂ ಹಾಗೂ ಮಗು-ಮಗುವಿಗೂ ತಲುಪಿಸಬೇಕು ಎಂದರು.
ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಸೈಬರ್ ಅಪರಾಧದ ಕುರಿತು ಜಾಗೃತಿ ಹೊಂದುವುದು ಅತಿ ಅಗತ್ಯವಾಗಿದೆ. ಆನ್‌ಲೈನ್ ಆ್ಯಪ್ ನಂಬಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಅಪರಾಧಗಳ ಬಗ್ಗೆ ಮಕ್ಕಳಿಗೆ ತಿಳಿವಳಿಕೆ ನೀಡಬೇಕು. ವಿವಿಧ ಸೈಬರ್ ಅಪರಾಧಗಳ ಕುರಿತು ಪಿಪಿಟಿಯ ಮೂಲಕ ವಿಸ್ತೃತವಾಗಿ ವಿವರಿಸಿದ ಅವರು, ವಂಚಕರು ಎಸಗುವ ಆಮಿಷಕ್ಕೆ ಒಳಗಾಗದೇ ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂದರು.
ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ವಸತಿ ನಿಲಯ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ಮಕ್ಕಳ ಕಲ್ಯಾಣಕ್ಕಾಗಿ ಒಗ್ಗೂಡಿ ಕಾರ್ಯನಿರ್ವಹಿಸೋಣ. ಕಾಯ್ದೆಗಳ ಅನುಷ್ಠಾನ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕಾಳಜಿಪೂರ್ವಕವಾಗಿ ಕಾರ್ಯನಿರ್ವಹಿಸಿ ಸಮಸ್ಯೆಗಳಿದ್ದಲ್ಲಿ ತಮ್ಮನ್ನು ಖುದ್ದಾಗಿ ಸಂಪರ್ಕಿಸುವಂತೆ ಹೇಳಿದರು.
ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ಶ್ರೀಧರ ಕುಲಕರ್ಣಿ, ಪ್ರಶಾಂತ ದೇಶಪಾಂಡೆ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಅವರು ಬಾಲ ಕಾರ್ಮಿಕ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಯ ಬಗ್ಗೆ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ಆತ್ಮಹತ್ಯೆ ತಡೆ ವಿಷಯದ ಕುರಿತಾಗಿ ಮನೋವೈದ್ಯ ಡಾ.ಮಂಜುನಾಥ ಮಸಳಿ ಅವರು ವಿಷಯ ಮಂಡಿಸಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಬಸಮ್ಮ ಹತ್ತರಕಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ. ಹೊಸಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವಾಣ್, ಡಿಎಚ್‌ಒ ಸಂಪತ್ ಗುಣಾರಿ, ವಾರ್ತಾಧಿಕಾರಿ ಅಮರೇಶ ದೊಡಮನಿ ಮತ್ತಿತರರಿದ್ದರು.