ಎಂ.ಬಿ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ 
ವಿಜಯಪುರ

ಬೆಳೆ ಹಾನಿ ಸಮಗ್ರ ಸಮೀಕ್ಷೆ ಮಾಡಿಸಿ

ವಿಜಯಪುರ : ಜಿಲ್ಲೆಯಲ್ಲಿ ಇತ್ತಚಿಗೆ ಸುರಿದ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದ ಉಂಟಾಗಿರುವ ಹಾನಿ ಕುರಿತು ಸಮಗ್ರ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಜಿಲ್ಲಾಧಿಕಾರಿಗೆ
ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಬೀಸಿದ ಬಿರುಗಾಳಿ ಮತ್ತು ಸುರಿದ ಆಲಿಕಲ್ಲು ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ ಕೂಡಲೇ ಅಧಿ
ಕಾರಿಗಳ ಸಭೆ ನಡೆಸಿ ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆಯಲ್ಲಿ ಬೆಳೆ ಹಾನಿಯಾದ ಯಾವುದೇ ರೈತರ ಹೆಸರು ಬಿಟ್ಟು ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕೃಷಿ ಮತ್ತು ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಸಮೀಕ್ಷೆ ನಡೆಸಬೇಕು. ಅಲ್ಲದೇ, ಈ ಕುರಿತು ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಸಚಿವರು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರಾಹುಲ ದೊಡ್ಡಿಮನಿ ಮತ್ತು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಅವರೊಂದಿಗೂ ಮಾತನಾಡಿರುವ ಸಚಿವರು, ಬೆಳೆ ಹಾನಿ ಕುರಿತು ಸಮಗ್ರ ಮತ್ತು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ಪ್ರಕಟಣೆ ತಿಳಿಸಿದೆ.