ವಿಜಯಪುರ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಮಹಿಳಾ ಕಲ್ಯಾಣ ವಿಭಾಗದ ಯೋಜನೆಗಳ ಪರಿಶೀಲನಾ ಸಭೆ ನಡೆಸಿದರು. ಎಸ್‌ಪಿ ಲಕ್ಷ್ಮಣ ನಿಂಬರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಇತರರಿದ್ದಾರೆ. 
ವಿಜಯಪುರ

ಬಾಲ್ಯವಿವಾಹ ತಡೆಗೆ ಸಮನ್ವಯ ಮುಖ್ಯ, ಅಧಿಕಾರಿಗಳಿಗೆ ಡಿಸಿ ಡಾ.ಆನಂದ ಕೆ ಸೂಚನೆ

ಪ್ರಮುಖ ಮುಖ್ಯಾಂಶಗಳು

  • ಮಹಿಳಾ ಕಲ್ಯಾಣ ಯೋಜನೆಗಳ ಪರಿಶೀಲನಾ ಸಭೆ
  • ಕಾವಲು ಸಮಿತಿ ಸಭೆ ನಡೆಸಲು ಸೂಚನೆ
  • ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಲು ಸಲಹೆ
ವಿಜಯಪುರ: ಬಾಲ್ಯವಿವಾಹ ಎಂಬ ಸಾಮಾಜಿಕ ಪಿಡುಗು ತೊಲಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಕಲ್ಯಾಣ ವಿಭಾಗದ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ತಿಂಗಳು ಕಾವಲು ಸಮಿತಿ ಸಭೆ ನಡೆಸಲು ಈಗಾಗಲೇ ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಕಾವಲು ಸಮಿತಿ ಚರ್ಚಿಸಿರುವ ವಿಷಯ ಪ್ರಚಾರ ಕೈಗೊಳ್ಳಬೇಕು. ಜನರಿಗೆ ಗೊತ್ತಾಗಬೇಕು. ಇದರಿಂದ ಕಾಯ್ದೆಯ ಅರಿವು ಜನರಲ್ಲಿ ಮೂಡಲಿದೆ ಎಂದರು.
ಜಿಂಗಲ್ಸ್ ಮೂಲಕ ಪ್ರಚಾರ ಮಾಡಬೇಕು. ಗ್ರಾಮೀಣ ಹಾಗೂ ಸ್ಥಳೀಯ ಸಂಸ್ಥೆಗಳ ಸ್ವಚ್ಛವಾಹಿನಿ ಮೂಲಕ ತಿಳಿಹೇಳಬೇಕು. ಮಕ್ಕಳ ಬಾಲ್ಯ ಸುಂದರಗೊಳ್ಳಲು ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯ ಸಾಧಿಸಿ ಬಾಲ್ಯ ವಿವಾಹ ತಡೆಯಬೇಕು ಎಂದರು.

13 ಬಾಲ್ಯ ವಿವಾಹ ತಡೆ

2026 ಮಾರ್ಚ್ ಅವಧಿಯಲ್ಲಿ ಜಿಲ್ಲೆಯಾದ್ಯಂತ ನಡೆದ ಕಾರ್ಯಾಚರಣೆಯಲ್ಲಿ ಸ್ವೀಕರಿಸಿದ 14 ದೂರುಗಳ ಪೈಕಿ 13 ಬಾಲ್ಯ ವಿವಾಹ ತಡೆಯಲಾಗಿದೆ. ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಸಾರ್ವಜನಿಕರು ತಮ್ಮ ಆಸುಪಾಸಿನಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದರೆ ತಕ್ಷಣವೇ ಸಂಬಂಧಪಟ್ಟ ಇಲಾಖೆ ಅಥವಾ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಮಹಿಳಾ ಸುರಕ್ಷತೆಗೆ ಆದ್ಯತೆ

ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಕ್ರಮವಹಿಸಲಾಗಿದೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತಿದ್ದು, ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆಶಾದಾಯಕ ಪ್ರಗತಿ ಕಂಡುಬಂದಿದೆ. 2026ರ ಮಾರ್ಚ್ ಅಂತ್ಯಕ್ಕೆ ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ ಒಟ್ಟು 184 ಪ್ರಕರಣಗಳ ಪೈಕಿ ಬಹುಪಾಲು ಪ್ರಕರಣಗಳಲ್ಲಿ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದರು.

ತ್ವರಿತ ದಾಖಲಾತಿ

ಕಳೆದ ತಿಂಗಳುಗಳಲ್ಲಿ ಬಾಕಿ ಇದ್ದ ಪ್ರಕರಣಗಳೊಂದಿಗೆ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ದಾಖಲಾದ 5 ಪ್ರಕರಣಗಳನ್ನೂ ಸೇರಿಸಿ ಅಧಿಕಾರಿಗಳು ತಕ್ಷಣದ ಕ್ರಮ ಕೈಗೊಂಡಿದ್ದಾರೆ. ದಾಖಲಾದ ಪ್ರಕರಣಗಳಲ್ಲಿ ಬರೀ ಕಾನೂನು ಹೋರಾಟ ಮಾತ್ರವಲ್ಲದೆ, ಕುಟುಂಬಗಳನ್ನು ಒಂದುಗೂಡಿಸುವ ಪ್ರಯತ್ನಕ್ಕೂ ಆದ್ಯತೆ ನೀಡಲಾಗಿದೆ. ಒಟ್ಟು 29 ಪ್ರಕರಣಗಳಲ್ಲಿ ಯಶಸ್ವಿಯಾಗಿ ಕೌನ್ಸೆಲಿಂಗ್ ನಡೆಸುವ ಮೂಲಕ ಕೌಟುಂಬಿಕ ಸಾಮರಸ್ಯವನ್ನು ಕಾಪಾಡಲಾಗಿದೆ.
ಅಂತಿಮ ಆದೇಶಕ್ಕಾಗಿ ಕಾಯುತ್ತಿದ್ದ ಪ್ರಕರಣಗಳಲ್ಲಿ 4 ಪ್ರಕರಣಗಳಿಗೆ ನ್ಯಾಯಾಲಯದಿಂದ ಅಂತಿಮ ತೀರ್ಪು ಲಭಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 151 ಪ್ರಕರಣಗಳು ವಿವಿಧ ಹಂತಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇವೆ. ವಿಜಯಪುರ ನಗರ ಮತ್ತು ಇಂಡಿ ಭಾಗಗಳಲ್ಲಿ ಹೆಚ್ಚಿನ ಪ್ರಕರಣಗಳ ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸುತ್ತಿದ್ದಾರೆ ಎಂದರು.

ಅಧಿಕಾರಿಗಳ ಸ್ಪಂದನೆ

ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಕೇವಲ ಕಾನೂನು ರಕ್ಷಣೆ ನೀಡುವುದಲ್ಲದೆ, ಅವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸವನ್ನು ಇಲಾಖೆ ನಿರ್ವಹಿಸಿ, ಕೌನ್ಸೆಲಿಂಗ್ ಮೂಲಕ ಅನೇಕ ಸಂಸಾರಗಳನ್ನು ಉಳಿಸಿ ಸಕಾರಾತ್ಮಕ ಸ್ಪಂದನೆ ಒದಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪೊಕ್ಸೊ ಪ್ರಕರಣಗಳ ಕುರಿತ ಸಭೆಗೆ ಮಾಹಿತಿ ನೀಡಲಾಯಿತು.
ಎಸ್‌ಪಿ ಲಕ್ಷ್ಮಣ ನಿಂಬರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ ಕುಸುನಾಳ, ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂ ಬಾಬಾ ಮುದ್ದೇಬಿಹಾಳ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಪರಸುರಾಮ ಹಿಟ್ನಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಮಂಟೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಕಾಳೆ, ಪೀಟರ್ ಅಲೆಕ್ಸಾಂಡರ್ ಇತರರಿದ್ದರು.