ವಿಜಯಪುರ ನಗರದ ನೂತನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸುದ್ದಿಗೋಷ್ಠಿ ನಡೆಸಿದರು. ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕಾಧಿಕಾರಿ ಸಿ.ಎಸ್. ಪೊಲೀಸ್ ಪಾಟೀಲ, ಸಹಾಯಕ ಇಂಜಿನೀಯರ್ ಆರ್.ಎನ್. ಮಸಳಿ ಇದ್ದಾರೆ.
- ಅಂತಿಮ ಹಂತ ತಲುಪಿದ ನಿಲ್ದಾಣ ಕಾಮಗಾರಿ
- ಗುಮ್ಮಟ ನಗರಿಯಲ್ಲಿ ಹಾರಲಿದೆ ಲೋಹದ ಹಕ್ಕಿ
- ಅಂತಿಮ ಹಂತದ ಕಾರ್ಯಗಳು ಪ್ರಗತಿಯಲ್ಲಿ
ವಿಜಯಪುರ: ‘ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ವರ್ಷಾರಂಭವಾಗುತ್ತಿದ್ದಂತೆಯೇ ವಿಮಾನ ಹಾರಿಸುವ ಪ್ರಯತ್ನ ಕೈಗೂಡಲಿದೆ’ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ತಿಳಿಸಿದರು.
ಶುಕ್ರವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಪರಿಸರ ಇಲಾಖೆಯ ಅನುಮತಿ ಇಲ್ಲದೇ ಇರುವುದರಿಂದ ಹಾಗೂ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದಾಗಿ ವಿಮಾನ ಹಾರಾಟ ವಿಳಂಬವಾಗಿದೆ. ನಂತರದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲರು ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸಿದ್ದರಿಂದ ಇದೀಗ ಮೂರು ವಾರಗಳ ಹಿಂದೆ ತಡೆಯಾಜ್ಞೆ ತೆರವಾಗಿದೆ ಎಂದರು.
ಜೊತೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ಕೋರಿದ್ದೇವೆ. ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ತಡವಾಗಬಹುದು. ಆದರೆ ಶೀಘ್ರದಲ್ಲೇ ಅನುಮತಿ ಸಿಗಲಿದೆ ಎಂದು ನಂಜಯ್ಯನಮಠ ವಿಶ್ವಾಸ ವ್ಯಕ್ತಪಡಿಸಿದರು.
ರಾತ್ರಿ ವಿಮಾನ ಹಾರಾಟಕ್ಕೆ ವ್ಯವಸ್ಥೆ ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೊಂದು ವಾರದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣವಾಗಲಿದೆ. ನೈಟ್ ಲ್ಯಾಂಡಿಂಗ್ ಗಾಗಿ ಭೂಸ್ವಾಧೀನ ಕಾರ್ಯ ಪ್ರಗತಿಯಲ್ಲಿದೆ.ಜನವರಿ ತಿಂಗಳೊಳಗಾಗಿ ವಿಮಾನಯಾನ ಆರಂಭೀಸುವ ಪ್ರಯತ್ನ ಸಫಲವಾಗಲಿದೆ ಎಂದರು.
ಈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ರಾತ್ರಿ ಕಾರ್ಯಾಚರಣೆಯನ್ನು ಕೈಕೊಳ್ಳಲು ಅವಶ್ಯವಿರುವ (ಭೂಸ್ವಾಧೀನ ಒಳಗೊಂಡಂತೆ) 65.00 ಕೋಟಿಗಳ ಮೊತ್ತವನ್ನು ಹಾಗೂ ರಾಷ್ಟ್ರೀಯ ಹೆದ್ದಾರಿ-50 (ವಿಜಯಪುರ-ಕಲಬುರಗಿ ರಸ್ತೆ) ಯಿಂದ ವಿಮಾನ ನಿಲ್ದಾಣಕ್ಕೆ ಚತುಷ್ಪಥ ರಸ್ತೆಯನ್ನು ನಿರ್ಮಾಣ ಮಾಡಲು ಅವಶ್ಯವಿರುವ (ಭೂಸ್ವಾಧೀನ ಒಳಗೊಂಡಂತೆ) 52.00 ಕೋಟಿಗಳ ರೂ.ಮೊತ್ತದ ಅನುದಾನಕ್ಕೆ ರಾಜ್ಯ ಸರ್ಕಾರ 2025ರ ಅಕ್ಟೋಬರ್ 3 ರಂದು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಎರಡೂ ಕಾಮಗಾರಿಗಳಿಗೆ ಅವಶ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಡಲು ಕೆ.ಐ.ಎ.ಡಿ.ಬಿ. ವತಿಯಿಂದ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ. ಈಗಾಗಲೇ ಪ್ರಾಥಮಿಕ ಅಧಿಸೂಚನೆ ಅನುಮೋದನೆಯಾಗಿದ್ದು, ಭೂಮಾಲಿಕರ ಜೊತೆ ಆಕ್ಷೇಪಣೆ ಸಭೆಯನ್ನು ಕೈಗೊಳ್ಳಲಾಗಿರುತ್ತದೆ. ಶೀಘ್ರದಲ್ಲೇ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದರು.
ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕಾಧಿಕಾರಿ ಸಿ.ಎಸ್. ಪೊಲೀಸ್ ಪಾಟೀಲ, ಸಹಾಯಕ ಇಂಜಿನೀಯರ್ ಆರ್.ಎನ್. ಮಸಳಿ, ವಿಮಾನ ನಿಲ್ದಾಣದ ನಿರ್ದೇಶಕ ಪಿ.ಸಿ. ಪೊನ್ನಪ್ಪ ಹಾಗೂ ಚಂದ್ರಶೇಖರ ಸೇರಿ ಇತರ ಅಧಿಕಾರಿಗಳಿದ್ದರು.