ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರಿಗೆ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮನವಿ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರಿದ್ದಾರೆ. 
ವಿಜಯಪುರ

ನೀಟ್ ಪರೀಕ್ಷಾ ಕೇಂದ್ರದಲ್ಲಿ ಸೌಲಭ್ಯಗಳ ಕೊರತೆ, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡದಿರಿ ಎಂದ ಭೋಗೇಶ ಸೋಲಾಪುರ

ಪ್ರಮುಖ ಮುಖ್ಯಾಂಶಗಳು

  • ಆಮ್ ಆದ್ಮಿಯಿಂದ ತೀವ್ರ ಖಂಡನೆ
  • ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ
  • ತ್ವರಿತವಾಗಿ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ
ವಿಜಯಪುರ: ನಗರದ ಗಾಂಧಿ ಚೌಕ್‌ನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೇ 3 ರಂದು ನಡೆಯಲಿರುವ ನೀಟ್ ಪರೀಕ್ಷಾ ಕೇಂದ್ರದಲ್ಲಿ ಮೂಲ ಸೌಲಭ್ಯಗಳು ಇಲ್ಲದಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಹೀಗಾಗಿ ಕೂಡಲೇ ಪರೀಕ್ಷಾ ಕೇಂದ್ರಕ್ಕೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಆಗ್ರಹಿಸಿದರು.
ಗುರುವಾರ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಅವರು, ವಿಜಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಫ್ಯಾನ್‌ಗಳ ವ್ಯವಸ್ಥೆ ಇಲ್ಲದಿರುವುದು, ನಿರಂತರ ವಿದ್ಯುತ್ ಪೂರೈಕೆಯ ಕೊರತೆ ಇರುವುದು ಕಂಡು ಬಂದಿದೆ. ಬೇಸಿಗೆಯ ತೀವ್ರ ಬಿಸಿಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಪರೀಕ್ಷಾ ಕೊಠಡಿಗಳಲ್ಲಿ ಫ್ಯಾನ್ ಇದ್ದರೆ ವಿದ್ಯುತ್ ಇಲ್ಲ, ವಿದ್ಯುತ್ ಇದ್ದರೆ ಫ್ಯಾನ್ ಇಲ್ಲ. ಕೆಲವೊಂದು ಕೊಠಡಿಗಳಲ್ಲಿ ವಿದ್ಯುತ್ ಹಾಗೂ ಫ್ಯಾನ್ ಪಾಯಿಂಟ್‌ಗಳೇ ಇಲ್ಲ ಎಂದರು.
ಕೂಡಲೇ ಸರ್ಕಾರ ಮೂಲ ಸೌಕರ್ಯ ಕಲ್ಪಿಸಬೇಕು. ವಿದ್ಯಾರ್ಥಿಗಳ ಆರೋಗ್ಯ ಕಾಪಾಡಲು ಕ್ರಮ ವಹಿಸಬೇಕು. ಪರೀಕ್ಷೆಗೆ ಸಕಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.