ವಿಜಯಪುರ ನಗರದ ಜಿಲ್ಲಾ ನ್ಯಾಯಾಲಯಾದ ಭವನದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ.ಎ ಸುದ್ದಿಗೋಷ್ಠಿ ನಡೆಸಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್ ಹಾಗರಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಸುನೀಲ ಬಿರಾದಾರ, ಖಜಾಂಚಿ ಎಂ.ಎ.ಕಾಖಂಡಕಿ ಇದ್ದಾರೆ.
- ಡಿ.13 ರಂದು ರಾಷ್ಟ್ರೀಯ ಲೋಕ್ ಅದಾಲತ್
- ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ
- ಜಿಲ್ಲೆಯ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಆಯೋಜನೆ
ವಿಜಯಪುರ: ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಡಿ. 13 ರಂದು ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ.ಎ ತಿಳಿಸಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡಿದುಕೊಳ್ಳಬೇಕೆಂದು ಕಕ್ಷಿದಾರರಿಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಪ್ರಕರಣಗಳ ಮಾದರಿ
ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನಕ್ಕೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು,ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು (ಡಿಆರ್‌ಟಿ), ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ), ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಬಾಕಿ ಇರುವ ಪ್ರಕರಣಗಳು
ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 2025 ನ.1ಕ್ಕೆ 45,902 ಸಿವಿಲ್ ಪ್ರಕರಣಗಳು ಹಾಗೂ 27,145 ಕ್ರಿಮಿನಲ್ ಪ್ರಕರಣಗಳು ಒಳಗೊಂಡಂತೆ ಒಟ್ಟು 73,047 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ ಈಗಾಗಲೇ 5,492 ಸಿವಿಲ್ ಪ್ರಕರಣಗಳು ಹಾಗೂ 6,830 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು 12,322 ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಸಂಬಂಧಿಸಿದ ವಕೀಲರು ಹಾಗೂ ಕಕ್ಷಿದಾರರೊಂದಿಗೆ ಮಾತುಕತೆಯ ಮೂಲಕ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಸಹ ರಾಜಿಗಾಗಿ ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.
ಸೆ.13 ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 1ಕ್ಕೆ ಬಾಕಿ ಇದ್ದ 75,117 ಪ್ರಕರಣಗಳಲ್ಲಿ 18,558 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿ, ರೂ.27,14,73,607 ಗಳ ಪರಿಹಾರ ಕೊಡಿಸಲಾಗಿದೆ. ಸುಮಾರು 1,88,060 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೂ.45,30,97,048 ಪರಿಹಾರ ಕೊಡಿಸಲಾಗಿದೆ. ಜು. 12 ರಂದು ಹಾಗೂ ಸೆ.13ರಂದು ನಡೆದ ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡುವಲ್ಲಿ ಜಿಲ್ಲೆಯು ರಾಜ್ಯಕ್ಕೆ ಸತತವಾಗಿ ಎರಡನೇ ಸ್ಥಾನ ಪಡೆದುಕೊಂಡಿದೆ.
ಆದ್ದರಿಂದ, ಡಿ. 13ರಂದು ಜಿಲ್ಲೆಯಲ್ಲಿ ಜರುಗುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆಯೂ, ಇದೇ ನ. 29ರಂದು ಜಿಲ್ಲೆಯಲ್ಲಿ ಖಾಯಂ ಜನತಾ ನ್ಯಾಯಾಲಯದ ಸಿಟ್ಟಿಂಗ್ ಆರಂಭವಾಗಲಿದೆ ಎಂದು ಹೇಳಿದರು.
2025 ನ.20ರ ರಾಜ್ಯ ಸರ್ಕಾರದ ಆದೇಶದಂತೆ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-2020ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ, 2025 ನ.21 ರಿಂದ ಡಿ.12ರವರೆಗೆ ಕಾಲಾವಕಾಶ ನೀಡಿದ್ದು, ಎಲ್ಲ ಕಕ್ಷಿದಾರರು ಹಾಗೂ ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್ ಹಾಗರಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಸುನೀಲ ಬಿರಾದಾರ, ಖಜಾಂಚಿ ಎಂ.ಎ.ಕಾಖಂಡಕಿ ಇದ್ದರು.