ವಿಜಯಪುರ ನಗರದ ವಿ.ಬಿ. ದರಬಾರ್ ಕಾಲೇಜಿನಲ್ಲಿ ಸ್ಥಾಪಿಸಲಾದ ದ್ವಿತೀಯ ಪಿಯುಸಿ ಪರೀಕ್ಷೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಭೇಟಿ ನೀಡಿ ಪರಿಶೀಲಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಕೆ. ಹೊಸಮನಿ ಇತರರಿದ್ದಾರೆ.
- ದ್ವಿತೀಯ ಪಿಯುಸಿ ಪರೀಕ್ಷೆ ಶುರು
- ಒಟ್ಟು 64 ಕೇಂದ್ರಗಳ ಸ್ಥಾಪನೆ
- 24,478 ವಿದ್ಯಾರ್ಥಿಗಳು ಹಾಜರು
- 1356 ವಿದ್ಯಾರ್ಥಿಗಳು ಗೈರು
ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆ-1ಗೆ ಮೊದಲ ದಿನವೇ 1356 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲಾದ್ಯಂತ ಒಟ್ಟು 64 ಕೇಂದ್ರಗಳಲ್ಲಿ ಪರೀಕ್ಷೆಗೆ ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಮೊದಲ ದಿನ ನಡೆದ ಕನ್ನಡ ಮತ್ತು ಅರೆಬಿಕ್ ಭಾಷಾ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 25,834 ವಿದ್ಯಾರ್ಥಿಗಳ ಪೈಕಿ 24,478 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಬೆಳಗ್ಗೆ ನಿಗದಿತ ಸಮಯಕ್ಕೆ ಆರಂಭಗೊಂಡ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜಿಲ್ಲಾಧಿಕಾರಿ ಡಾ. ಆನಂದ ಕೆ ಹಾಗೂ ಜಿಪಂ ಸಿಇಒ ರಿಷಿ ಆನಂದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಗರದ ವಿ.ಬಿ. ದರಬಾರ ಕಾಲೇಜ್, ಎಸ್.ಎಸ್. ಪದವಿ ಪೂರ್ವ ಕಾಲೇಜ್ ಹಾಗೂ ಖೇಡ ಕಾಲೇಜಿನಲ್ಲಿ ನಡೆದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ, ಸುಸೂತ್ರ ಹಾಗೂ ಸುಗಮ ಪರೀಕ್ಷೆ ನಡೆಸಲು ಕೈಗೊಳ್ಳಲಾದ ವ್ಯವಸ್ಥೆ ಕುರಿತಾಗಿ ಪರಿಶೀಲನೆ ನಡೆಸಿದರು. ನಿಯೋಜಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗದೇ ಅತ್ಯಂತ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಅಗತ್ಯ ಗಾಳಿ, ಬೆಳಕು ಕುಡಿಯುವ ನೀರು ಒದಗಿಸಬೇಕೆಂದು ಸೂಚಿಸಿದರು.
ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಾರದ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕು. ಯಾವುದೇ ದೂರಿಗೆ ಆಸ್ಪದೆ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿದ ಪರೀಕ್ಷಾ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಮಾಹಿತಿ, ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲ ಸೌಲಭ್ಯ, ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿಸಿಟಿವಿ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತಾ ಹಾಗೂ ವೈದ್ಯಕೀಯ ವ್ಯವಸ್ಥೆ ಕಲ್ಪಿಸಿರುವ ಕುರಿತು ಮಾಹಿತಿ ಪಡೆದುಕೊಂಡರು.
ಪರೀಕ್ಷಾ ಕೇಂದ್ರಗಳಿಗೆ ಭದ್ರತೆ, ವೆಬ್ ಕಾಸ್ಟಿಂಗ್, ಪ್ರಥಮ ಚಿಕಿತ್ಸಾ ವ್ಯವಸ್ಥೆಯ ಕಿಟ್, ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರ ನೇಮಕ, ಕುಡಿಯುವ ನೀರು, ಶೌಚಗೃಹ ವ್ಯವಸ್ಥೆ ಮತ್ತಿತರ ಸೌಲಭ್ಯಗಳ ಕುರಿತು ಪರಿಶೀಲಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಕೆ. ಹೊಸಮನಿ ಮತ್ತಿತರರಿದ್ದರು.
ವೆಬ್ ಕಾಸ್ಟಿಂಗ್ ಪರಿಶೀಲಿಸಿದ ಸಿಇಒ
ದ್ವಿತೀಯ ಪಿಯುಸಿ ಪರೀಕ್ಷೆ ಪಾರದರ್ಶಕ ಮತ್ತು ನಕಲು ಮುಕ್ತವಾಗಿ ನಡೆಸುವ ದೃಷ್ಟಿಯಿಂದ ನಗರದ ಜಿಲ್ಲಾ ಪಂಚಾಯಿತಿ ಸಂಪನ್ಮೂಲ ಕೇಂದ್ರದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಪಂ ಸಿಇಒ ರಿಷಿ ಆನಂದ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರ, ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ವೀಕ್ಷಿಸಿದರು. ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು.ಎನ್‌ಐಸಿ ಅಧಿಕಾರಿ ಶಿವಾನಂದ ಗೂಗವಾಡ, ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥ ಮಹಾಂತೇಶ ಹಿಪ್ಪರಗಿ, ವೆಬ್ ಕಾಸ್ಟಿಂಗ್ ಕೇಂದ್ರದ ಸಹಾಯಕ ಮಹಾಂತೇಶ ಕನ್ನೂರ, ಜಿಲ್ಲಾ ಪಂಚಾಯಿತಿಯ ಎಡಿಪಿಎಂ ಮಕ್ತುಮಸಾಬ ಮುಲ್ಲಾ ಮತ್ತಿತರರಿದ್ದರು.